ಬೆಂಗಳೂರು: ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ (Multiplex Theatre) ಟಿಕೆಟ್ ದರ 200 ರೂ.ಗೆ ನಿಗದಿಪಡಿಸಿ ಸರ್ಕಾರದಿಂದ ಆದೇ ಹೊರಡಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಸಲ್ಲಿಸಿದೆ.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ಸಾ.ರಾ ಗೋವಿಂದು ನೇತೃತ್ವದ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಟಿಕೆಟ್ ದರ (Cinema Ticket Price) 200 ರೂ.ಗೆ ನಿಗದಿಪಡಿಸುವಂತೆ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿದೆ: ಸಿಎಂ
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಾ.ರಾ ಗೋವಿಂದು, ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ ದರ ನಿಗದಿಪಡಿಸಲಾಗುತ್ತಿದೆ. ಇದರಿಂದ ಕನ್ನಡ ಪ್ರೇಕ್ಷಕರಿಗೆ ಹೊರೆಯಾಗಿರುತ್ತದೆ. ಹಾಗಾಗಿ ಟಿಕೆಟ್ ದರ 200 ರೂ. ಮೀರದಂತೆ ನಿಗದಿಪಡಿಸುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಇದೇ ರೀತಿ ಮನವೊಗೆ ವಾರ್ತಾ ಇಲಾಖೆಯ ಮೂಲಕ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಿ ಸರ್ಕಾರ ಟಿಕೆಟ್ ದರ ನಿಗದಿಪಡಿಸಬೇಕೆಂದು ಮನವಿ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ – ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದ ಸಿಎಂ
ದುಬಾರಿ ಪ್ರವೇಶದರದಿಂದ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಲು ಪ್ರೇಕ್ಷಕರು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಂಡು ಚಿತ್ರ ನಿರ್ಮಾಣಕ್ಕೆ ಹಾಕಿದ ಬಂಡವಾಳ ವಾಪಸ್ ಪಡೆಯಲು ಕಷ್ಟಸಾಧ್ಯವಾಗುತ್ತಿದೆ. ಹಾಗಾಗಿ ಕೂಡಲೇ 200 ರೂ. ಮೀರದಂತೆ ಪ್ರವೇಶದರ ನಿಗದಿಪಡಿಸಲು ಕೋರಿದ್ದೇವೆ. ಈಗಾಗಲೇ ನೆರೆರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ ಮತ್ತು ಚೆನ್ನೈ ಮಲ್ಟಿಪ್ಲೆಕ್ಸ್‌ಗಳಲ್ಲಿ 150 ರೂ. ನಿಂದ 200 ರೂ. ಪ್ರವೇಶದರ ನಿಗದಿಪಡಿಸಲಾಗಿದೆ. ನಮ್ಮಲ್ಲೂ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ 150 ರೂ.ನಿಂದ 200 ರೂ.ಗೆ ಟಿಕೆಟ್ ದರ ನಿಗದಿ ಮಾಡಿ ಸರ್ಕಾರದಿಂದಲೇ ಆದೇಶ ಹೊರಡಿಸುವಂತೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ.