ಬೆಂಗಳೂರು: ಇಲ್ಲಿನ ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋ ಡಿಕ್ಕಿಯಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ. ಇದನ್ನೂ ಓದಿ: ಉದ್ಯೋಗದ ಆಸೆ ತೋರಿಸಿ ಭಾರತೀಯ ಮಹಿಳೆ ಕಿಡ್ನ್ಯಾಪ್; 11 ಲಕ್ಷ ಹಣಕ್ಕೆ ಬಿಯರ್ ಅಂಗಡಿ ಮಾಲೀಕನಿಗೆ ಸೇಲ್
ಏನಿದು ಪ್ರಕರಣ?
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಒದಗಿಸಿದೆ. ಇದನ್ನೂ ಓದಿ: ‘ಪಬ್ಲಿಕ್ ಟಿವಿ’ ಉದ್ಯೋಗ ಮೇಳದಲ್ಲಿ ಕೆಲಸ ಸಿಕ್ಕವರಿಗೆ ಆಫರ್ ಲೆಟರ್ ವಿತರಣೆ



