ಬೆಂಗಳೂರು: ವಸಂತಪುರದ ಯಾದಾಳಮ್ಮ ದೇವಸ್ಥಾನದ ಬಳಿ ರೌಡಿಶೀಟರ್ ತಲೆ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸುಶಾಂತ್ ಅಲಿಯಾಸ್ ಪೇಯಿ ಕೊಲೆಯಾದ ರೌಡಿಶೀಟರ್. ಸುಬ್ರಮಣ್ಯಪುರದ ರೌಡಿಶೀಟರ್ ಆಗಿದ್ದ ಸುಶಾಂತ್ ಮೇಲೆ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಶುಕ್ರವಾರ ಸುಶಾಂತ್ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು, ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಯಾದ ರೌಡಿಶೀಟರ್ ಸುಶಾಂತ್ ವಿರುದ್ಧ ಕೆಂಗೇರಿ, ಆರ್.ಆರ್.ನಗರ ಹಾಗೂ ಸುಬ್ರಮಣ್ಯಪುರದ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv