ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ (Brahmavara) ರೌಡಿಶೀಟರ್ನನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43) ಕೊಲೆಯಾದ ವ್ಯಕ್ತಿಯಾಗಿದ್ದು, ಕೊಲೆ ಪ್ರಕರಣದ ಆರೋಪಿ ಎನ್ನಲಾದ ರಿಕ್ಷಾ ಚಾಲಕ ಪ್ರಮೋದ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು. ಸುಜಿತ್ ಪಿಂಟೊ, ಪ್ರಮೋದ್ಗೆ ಹಣ ಪಾವತಿಸುವುದು ಬಾಕಿ ಇದ್ದುದೇ ಗಲಾಟೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇಬ್ಬರೂ ಮದ್ಯದ ಅಮಲಿನಲ್ಲಿದ್ದ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್, ಕಬ್ಬಿಣದ ರಾಡ್ನಿಂದ ಸುಜಿತ್ ಪಿಂಟೊ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸುಜಿತ್ ಪಿಂಟೊ ಮೃತಪಟ್ಟಿದ್ದಾನೆ.
ಕೊಲೆಯಾದ ಸುಜಿತ್ ಪಿಂಟೊ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. 2018ರಲ್ಲಿ ನಡೆದ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಹಾಗೂ 2020ರಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಪ್ರಮೋದ್ನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
