ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್‍ಎ ಬೊಬ್ಡೆ ನೇಮಕ

Public TV
1 Min Read
Justice SA Bobde1 1

ನವದೆಹಲಿ: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿ ಶರಾದ್ ಅರವಿಂದ್ ಬೊಬ್ಡೆ ಅವರನ್ನು ಇಂದು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

ಈಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನಂತರ ಹಿರಿಯ ನ್ಯಾಯಮೂರ್ತಿಯಾಗಿದ್ದ ಬಾಬ್ಡೆ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನವೆಂಬರ್ 18 ರಂದು ಪ್ರಮಾಣ ವಚನ ಭೋದಿಸಲಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು ಮಧ್ಯಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಕಾರ್ಯನಿರ್ವಹಿಸಿದ್ದಾರೆ. ಅವರು 23 ಏಪ್ರಿಲ್ 2021 ರಂದು ನಿವೃತ್ತರಾಗಲಿದ್ದಾರೆ.

ಈ ಹಿಂದೆ ಈ ವಿಚಾರವಾಗಿಯೇ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೋಯ್ ಅವರು ತನ್ನ ನಂತರ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಾಧೀಶ ಎಸ್.ಎ ಬೊಬ್ಡೆ ಅವರನ್ನು ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ರಂಜನ್ ಗೊಗೋಯ್ ಅವರು ನವೆಂಬರ್ 17 ರಂದು ಮುಖ್ಯ ನ್ಯಾಯಾಧೀಶರ ಸ್ಥಾನದಿಂದ ನಿವೃತ್ತಿ ಹೊಂದಲಿದ್ದು, ತನ್ನ ನಂತರ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿ ಎಸ್.ಎ ಬೊಬ್ಡೆ ಅವರನ್ನು ನೇಮಕ ಮಾಡಿ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರ ಬರೆದಿದ್ದರು.

2018ರ ಅಕ್ಟೋಬರ್ 3 ರಂದು ಭಾರತದ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ರಂಜನ್ ಗೊಗೋಯ್, ಮುಂದಿನ ತಿಂಗಳು ಅಂದರೆ ನವೆಂಬರ್ 17 ರಂದು ನಿವೃತ್ತಿ ಆಗಲಿದ್ದಾರೆ. ಇವರ ನಂತರ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ ಅವರು ಆ ಸ್ಥಾನವನ್ನು ಪಡೆಯಲಿದ್ದಾರೆ.

Supreme Court of India

ನ್ಯಾಯಮೂರ್ತಿ ಎಸ್‍ಎ ಬೊಬ್ಡೆ ಅವರು ಮಧ್ಯಪ್ರದೇಶದ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಮಹಾರಾಷ್ಟ್ರದ ನಾಗ್ಪುರದಲ್ಲಿ 1956ರ ಏಪ್ರಿಲ್ 24 ರಂದು ಜನಿಸಿರುವ ಬೊಬ್ಡೆ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಹೆಚ್ಚುವರಿ ನ್ಯಾಯಾಧೀಶರಾಗಿ 2000ರಲ್ಲಿ ಬಾಂಬೆ ಹೈಕೋರ್ಟಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. 2012 ರಲ್ಲಿ ಅವರು ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ನಂತರ ಅವರನ್ನು 2013 ರ ಏಪ್ರಿಲ್‍ನಲ್ಲಿ ಸುಪ್ರೀಂ ಕೋರ್ಟಿಗೆ ನ್ಯಾಯಾಧೀಶರಾಗಿ ನೇಮಕ ಮಾಡಲಾಯಿತು. ಬೊಬ್ಡೆ ಅವರು 2021ರ ಏಪ್ರಿಲ್ 23 ರಂದು ನಿವೃತ್ತರಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *