ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಂಭಾಲ್‌ನಲ್ಲಿ (Sambhal) ಮೊಘಲರ ಕಾಲದ ಶಾಹಿ ಜಾಮಾ ಮಸೀದಿ(Shahi Jama Masjid) ಸಮೀಕ್ಷೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಸಂಸದ ಸೇರಿ 400 ಜನರ ವಿರುದ್ಧ 7 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಸಂಬಂಧ ಕನಿಷ್ಠ 25 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ಸಂಬಂಧ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಇಕ್ಬಾಲ್ ಮಹಮೂದ್ ಅವರ ಪುತ್ರ ನವಾಬ್ ಸುಹೇಲ್ ಇಕ್ಬಾಲ್ ಅವರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ಭಾನುವಾರ ಬೆಳಗ್ಗೆ ನ್ಯಾಯಾಲಯದ ಆದೇಶದ ಮೇರೆಗೆ ಸಮೀಕ್ಷೆಗೆ ಅಧಿಕಾರಿಗಳ ತಂಡ ತೆರಳಿತ್ತು. ಈ ವೇಳೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಘಷಣೆ ನಡೆದಿತ್ತು. ಈ ವೇಳೆ ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಮತ್ತು ಲಾಠಿಚಾರ್ಜ್ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸರುವ ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್, ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ತಲೆಗೆ ಪೆಟ್ಟಾಗಿರುವ ಕಾನ್‌ಸ್ಟೆಬಲ್ ಸ್ಥಿತಿ ಚಿಂತಾಜನಕವಾಗಿದೆ. ಈ ಹಿಂದೆ ಬಾರ್ಕ್ ನೀಡಿದ್ದ ಹೇಳಿಕೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಿದ್ದಾರೆ.
ಪೊಲೀಸರು ಡ್ರೋನ್ ದೃಶ್ಯಗಳನ್ನು ಬಳಸಿಕೊಂಡು ಹಿಂಸಾಚಾರ ನಡೆಸಿದವರನ್ನು ಗುರುತಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಾಹಿ ಜಾಮಾ ಮಸೀದಿ ಮೂಲತಃ ಹರಿ ಹರ್ ಮಂದಿರ ಎಂದು ವಕೀಲ ವಿಷ್ಣು ಶಂಕರ್ ಜೈನ್ ಎಂಬವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಮೊಘಲರ ದೊರೆ ಬಾಬರ್ ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದ್ದ ಎಂದು ಉಲ್ಲೇಖಿಸಲಾಗಿದೆ. ಈ ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಾಲಯ ವಿಡಿಯೋ ಹಾಗೂ ಫೋಟೋ ತೆಗೆದು ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.