ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ (BJP) ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.
ದೇವರಾಜೇಗೌಡ ( Devarajegowda) ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅವರು ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ (Prajwal Revanna Pendrive case) ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ ಜೆಡಿಎಸ್ (JDS) ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು. ಅಲ್ಲದೇ ಪ್ರಜ್ವಲ್ ಲೈಂಗಿಕ ಕಿರುಕುಳದ ವೀಡಿಯೋಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ನಾಯಕರನ್ನು ದೂಷಿಸಿದ್ದರು.
ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್ ಮಾಡಿ ತನ್ನ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಮಹಿಳೆ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.