– ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಏರಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ(Shakti Scheme) ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದಾಗಿನಿಂದ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಬಸ್ಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಇದೀಗ ಮಹತ್ವದ ಹಾಗೂ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ.
ಇನ್ಮುಂದೆ ಸರ್ಕಾರಿ ಬಸ್ಗಳು ಸೇರಿದಂತೆ ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕ ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕೆ ತಕ್ಕಂತೆ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸಾರಿಗೆ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ (RTO) ಖಡಕ್ ಸೂಚನೆ ನೀಡಿದ್ದಾರೆ.
ಮಹಿಳೆಯರ ಉಚಿತ ಪ್ರಯಾಣ ಸೌಲಭ್ಯದ ಪರಿಣಾಮವಾಗಿ ಬಸ್ಗಳಲ್ಲಿ ಜನಸಂದಣಿ ವಿಪರೀತವಾಗಿದೆ. ಸಾಮಾನ್ಯವಾಗಿ ಸಾರಿಗೆ ಸಂಸ್ಥೆಯ ಬಸ್ಗಳಿಗೆ ಸುಮಾರು 55 ಮಂದಿ ಹಾಗೂ ಬಿಎಂಟಿಸಿ (BMTC) ಬಸ್ಗಳಿಗೆ ಸುಮಾರು 40 ಮಂದಿ ಪ್ರಯಾಣಿಕರನ್ನು ಕರೆದೊಯ್ಯುವ ಸಾಮರ್ಥ್ಯವಿದೆ. ಆದರೆ ಪ್ರಸ್ತುತ ಈ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಮಂದಿ ಬಸ್ಗಳಲ್ಲಿ ಕಿಕ್ಕಿರಿದು ಪ್ರಯಾಣಿಸುತ್ತಿರುವ ಬಗ್ಗೆ ಸಾರಿಗೆ ಇಲಾಖೆಗೆ ದೂರುಗಳು ಬಂದಿವೆ. ಬಸ್ಗಳಲ್ಲಿ ನೇತಾಡಿಕೊಂಡು ಹಾಗೂ ನಿಗದಿಗಿಂತ ಹೆಚ್ಚು ಜನರನ್ನು ಹೇರಿಕೊಂಡು ಹೋಗುವುದರಿಂದ ಅಪಾಯದ ಆತಂಕವೂ ಎದುರಾಗಿದೆ. ಇದನ್ನೂ ಓದಿ: ಮುಂದಿನ 25 ದಿನಗಳಲ್ಲಿ 52 ಲಕ್ಷ ಮದುವೆ – 7.5 ಲಕ್ಷ ಕೋಟಿ ವಹಿವಾಟು ನಿರೀಕ್ಷೆ
ಆದೇಶದಲ್ಲೇನಿದೆ?
ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ಹೇರಿಕೊಂಡು ಹೋಗುವುದನ್ನು ತಡೆಗಟ್ಟಿ, ಆಸನದ ಸಾಮರ್ಥ್ಯಕ್ಕೆ ತಕ್ಕಂತೆ ಪ್ರಯಾಣಿಕರನ್ನು ಕರೆದೊಯ್ಯುವ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಿಯಮಗಳನ್ನು ಉಲ್ಲಂಘಿಸಿ ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳ ವಿರುದ್ಧ ಅಧಿಕಾರಿಗಳು ತಮ್ಮ ಹಂತದಲ್ಲಿಯೇ ತಪಾಸಣೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವುದರ ವಿರುದ್ಧ ಸಾರಿಗೆ ನಿಗಮಗಳಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ. ಮುಂಬರುವ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ತಮ್ಮ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಾರಿಗೆ ನಿಗಮಗಳಿಗೆ ಸ್ಪಷ್ಟ ಮಾಹಿತಿ ಮತ್ತು ನಿರ್ದೇಶನ ನೀಡುವಂತೆ ಆಯುಕ್ತರು ತಿಳಿಸಿದ್ದಾರೆ.
