ಶಿವಮೊಗ್ಗ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ನಿಖಿಲ್ ಮೃತಪಟ್ಟ ವಿದ್ಯಾರ್ಥಿ. ಮೃತ ನಿಖಿಲ್ ದಾವಣಗೆರೆ ಮೂಲದವನಾಗಿದ್ದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಪುರ್ಲೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.
Advertisement
Advertisement
ನಿಖಿಲ್ ನಿನ್ನೆ ಮಧ್ಯಾಹ್ನ ಮನೆಯಲ್ಲಿದ್ದಾಗ ಮನೆಯಿಂದ ಹೊಗೆ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಮನೆ ಬಾಗಿಲು ತೆಗೆದು ನೋಡಿದಾಗ ಮೃತ ನಿಖಿಲ್ ನೆಲದ ಮೇಲೆ ಬಿದ್ದಿರುವುದನ್ನು ನೋಡಿದ್ದಾರೆ. ಸ್ಥಳೀಯರು ತಕ್ಷಣ ನಿಖಿಲ್ ಸ್ನೇಹಿತರಿಗೆ ಈ ವಿಷಯ ತಿಳಿಸಿದ್ದಾರೆ. ಆತನ ವೈದ್ಯಕೀಯ ಸ್ನೇಹಿತರು ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದಾಗ ನಿಖಿಲ್ ಮೃತಪಟ್ಟಿದ್ದನು.
Advertisement
ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತ ದೇಹವನ್ನು ಶಿವಮೊಗ್ಗದ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆದರೆ ಮೃತ ನಿಖಿಲ್ ಪೋಷಕರು ಹಾಗೂ ಆತನ ಸ್ನೇಹಿತರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಹಾಗೂ ಪೊಲೀಸರ ತನಿಖೆ ನಂತರ ಸಾವಿನ ರಹಸ್ಯ ಬಹಿರಂಗವಾಗಬೇಕಿದೆ.