Connect with us

Districts

ಜಿಲ್ಲೆಯಲ್ಲಿ ರೈಲ್ವೆ, ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಕ್ರಮ: ಬಿ.ವೈ ರಾಘವೇಂದ್ರ

Published

on

ಶಿವಮೊಗ್ಗ: ರೈಲ್ವೇ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ರಿಯವಾಗಿದ್ದು, ಮುಂಬರುವ ದಿನಗಳಲ್ಲಿ ತಜ್ಞರ ಸಲಹೆ ಪಡೆದು ಜಿಲ್ಲೆಯನ್ನು ಪ್ರವಾಸಿಗರ ಆಕರ್ಷಕ ತಾಣವನ್ನಾಗಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈಲ್ವೆ ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿಗೆ ಈಗಾಗಲೇ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಜಿಲ್ಲೆಯ ಆಯ್ದ ನಾಲ್ಕು ಸ್ಥಳಗಳಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ರಾಜ್ಯದಲ್ಲಿ ಆಯ್ದ 5 ಸ್ಥಳಗಳಲ್ಲಿ ರೈಲ್ವೆ ಕೋಚಿಂಗ್ ಮತ್ತು ಟರ್ಮಿನಲ್ ಸೆಂಟರ್ ಗಳಿದ್ದು, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿಯೂ ಟರ್ಮಿನಲ್ ನಿರ್ಮಾಣಗೊಳ್ಳಲಿದೆ. ಅದಕ್ಕಾಗಿ 75 ಕೋಟಿ ಅನುದಾನ ಮಂಜೂರಾಗಿದೆ. ಈ ಸಂಬಂಧ ಭೂಸ್ವಾದೀನ ಪ್ರಕ್ರಿಯೆ ಇನ್ನೂ ಒಂದು ವಾರದೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಸರ್ವೇ ಕಾರ್ಯವು 2 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಶಿಕಾರಿಪುರ ಮತ್ತು ಶಿವಮೊಗ್ಗ ಹಾಗೂ ಎರಡನೇ ಹಂತದಲ್ಲಿ ಶಿಕಾರಿಪುರ ಮತ್ತು ರಾಣೆಬೆನ್ನೂರು ಮಾರ್ಗದ ಸರ್ವೇ ಕಾರ್ಯ ನಡೆಯಲಿದೆ. ಈಗಾಗಲೇ ಮೊದಲ ಹಂತದಲ್ಲಿ ಬರುವ 14 ಹಳ್ಳಿಗಳಲ್ಲಿ ಕಂದಾಯ ಮತ್ತು ರೈಲ್ವೆ ಇಲಾಖೆಗಳ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. 8 ಗ್ರಾಮಗಳಿಗೆ ಅಂತಿಮ ಹಂತದ ನೋಟಿಫಿಕೇಶನ್ ಕೂಡ ಆಗಿದೆ. ಮುಂದಿನ ಒಂದು ತಿಂಗಳಲ್ಲಿ ಭೂ ಪರಿಹಾರ ನೀಡಿ ಈ ಭಾಗದ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅನೇಕ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಗ್ಯವಾಗಿವೆ. ಅವುಗಳಲ್ಲಿ ಪ್ರಮುಖವಾದ ಕೆಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು 150 ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾಗೋಪುರ, ಕಾರಂಜಿ ನಿರ್ಮಾಣ, ವಿಶ್ರಾಂತಿ ಗೃಹ, ಉದ್ಯಾನವನ, ಮಳೆಗಾಲವನ್ನು ಹೊರತುಪಡಿಸಿ ವರ್ಷ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಜಲಪಾತಕ್ಕೆ ನೀರು ಹರಿಸುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸರ್ಕಾರವು ಮುಂದಿನ ಬಜೆಟ್‍ನಲ್ಲಿ ಘೋಷಿಸುವ ನಿರೀಕ್ಷೆ ಇದೆ ಎಂದರು.

25 ಕೋಟಿ ರೂ.ಗಳ ವೆಚ್ಚದಲ್ಲಿ ಉಡುತಡಿಯ ಅಕ್ಕಮಹಾದೇವಿ ಜನ್ಮಸ್ಥಳವನ್ನು ದೆಹಲಿಯ ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದು ಅಭಿವೃದ್ದಿಯ ನಂತರ 12 ನೇ ಶತಮಾನದ ಅಕ್ಕನ ಇತಿಹಾಸ ಸಾರುವಂತೆ ಸೃಷ್ಠಿಗೊಳ್ಳಲಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆ ಬಿಡಾರವನ್ನು ಸುಮಾರು 25 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ 5 ಹೆದ್ದಾರಿಗಳಿವೆ. ನಗರದಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಇವುಗಳನ್ನು ಒಳಗೊಂಡು 34 ಕಿ.ಮೀ. ಉದ್ದದ ವರ್ತುಲ ರಸ್ತೆ ನಿರ್ಮಾಣಗೊಳ್ಳಲಿದೆ. ಈ ಪೈಕಿ 15 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಸೇರಿದೆ. 15 ಕಿ.ಮೀ. ಶಿವಮೊಗ್ಗ-ತುಮಕೂರು ಹೆದ್ದಾರಿ ಸೇರಿದೆ. ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 560 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ. ಈ ಕಾಮಗಾರಿಗೆ ರಾಜ್ಯದಿಂದ 100 ಕೋಟಿ ರೂ. ಹಾಗೂ ಕೇಂದ್ರದಿಂದ 430 ಕೋಟಿ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ಉಳಿದಂತೆ ವಿಮಾನ ನಿಲ್ದಾಣ ಕಾಮಗಾರಿಗೆ 2 ನೇ ಹಂತದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಂಕಿಪಾರ್ಕ್ ಸ್ಥಾಪನೆಗೆ ಸ್ಥಳ ನಿಗದಿಪಡಿಸಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಜ್ಞರ ಅಭಿಪ್ರಾಯ ಪಡೆದು, ಯಾರಿಗೂ ತೊಂದರೆಯಾಗದಂತೆ ಮಂಕಿಪಾರ್ಕ್ ಸ್ಥಾಪಿಸಲಾಗುವುದು ಎಂದರು.

ವಿಶೇಷವಾಗಿ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ಕೈಗಾರಿಕೆಗಳಾದ ಮೈಸೂರು ಕಾಗದ ಕಾರ್ಖಾನೆ ಹಾಗೂ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ 1000 ಜನರಿಗೆ ಉದ್ಯೋಗಾವಕಾಶ ಒದಗಿಸುವ ಹಾಗೂ ಪರೋಕ್ಷವಾಗಿ 1000 ಜನರಿಗೆ ಉದ್ಯೋಗ ಒದಗಿಸುವ ಷರತ್ತಿಗೊಳಪಟ್ಟು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಉಳಿದಂತೆ ಕಾರ್ಖಾನೆಯ 1 ಲಕ್ಷ ಎಕರೆ ಅರಣ್ಯಭೂಮಿಯನ್ನು ಕಾರ್ಖಾನೆಗೆ ಉಳಿಸಿಕೊಳ್ಳಲಾಗುವುದು ಎಂದು ನುಡಿದರು.

Click to comment

Leave a Reply

Your email address will not be published. Required fields are marked *