ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ 16 ಪ್ರಕರಣಗಳನ್ನು ಬೇಧಿಸಿ 774 ಗ್ರಾಂ ಚಿನ್ನ, 4 ಕೆ.ಜಿ ಬೆಳ್ಳಿ ಸೇರಿದಂತೆ ಒಟ್ಟು 27,28,721 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಲ್ಲಿ ಕಳುವಾದ ಮಾಲು ಸಮೇತ ಐದು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಚಿತ್ರದುರ್ಗ ಹಾಗೂ ಬೆಂಗಳೂರು ಮೂಲದವರಾಗಿದ್ದು, ಬಂಧಿತರನ್ನು ಮಂಜುನಾಥ್, ರಂಗನಾಥ, ವೆಂಕಟೇಶ, ಶಶಿಕುಮಾರ, ರಾಜೇಶ, ಗವಿರಾಜ, ರಾಜಪ್ಪ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೆ, ಬೇರೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಚಿಕ್ಕಮಗಳೂರು ಕಾರಾಗೃಹದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ತಿಳಿಸಿದ್ದಾರೆ.
Advertisement
ಆರೋಪಿಗಳ ಬಂಧನದಿಂದ ಶಿರಾಳಕೊಪ್ಪ ಠಾಣಾ ವ್ಯಾಪ್ತಿಯಲ್ಲಿ 4, ಶಿಕಾರಿಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ 4, ಸೊರಬ ಠಾಣಾ ವ್ಯಾಪ್ತಿಯಲ್ಲಿ 2 ಹಾಗೂ ಆನವಟ್ಟಿ ಠಾಣಾ ವ್ಯಾಪ್ತಿಯಲ್ಲಿ 6 ಮನೆಗಳ್ಳತನ ಸೇರಿದಂತೆ ಒಟ್ಟು 16 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದ್ಯ ಪೊಲೀಸರು ಆರೋಪಿಗಳಿಂದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ಹುಂಡೈ ಕಾರು ಹಾಗೂ ಟಾಟಾ ಏಸ್ ಲಗೇಜ್ ಆಟೋವನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.