Sunday, 21st July 2019

ಇಂದಿರಾಗಾಂಧಿ ಗೆದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಅಧೋಗತಿ – ಕರಂದ್ಲಾಜೆ ಲೇವಡಿ

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಇಂದು ಅಧೋಗತಿ ಕಂಡಿದೆ. ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಪರಿಸ್ಥಿತಿ ಬಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ಗೋವಾ ಸಿಎಂ ಮನೋಹರ ಪರಿಕ್ಕರ್ ಅವರಿಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಕ್ಷೇತ್ರ ಸಿಕ್ಕರೂ ಜೆಡಿಎಸ್ ಅಭ್ಯರ್ಥಿಗಳಿಗೆ ಹುಡುಕಾಟ ಮಾಡುತ್ತಿದೆ. ಕಾಂಗ್ರೆಸ್ ನಾಯಕರನ್ನು ಪಕ್ಷದತ್ತ ಸೆಳೆಯುತ್ತಿದೆ ಎಂಬ ಮಾಹಿತಿಯಿದೆ. ಈ ಎಲ್ಲಾ ಬೆಳವಣಿಗೆಯನ್ನು ಹೊರತು ಪಡಿಸಿಯೂ ಬಿಜೆಪಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2019 ರ ಚುನಾವಣೆಯೆಂಬ ಯುದ್ಧವನ್ನು ಬಿಜೆಪಿ ಗೆಲ್ಲುತ್ತದೆ. ಪಕ್ಷದ ಕಾರ್ಯಕರ್ತರು, ಸಂಘ ಪರಿವಾರ ಸೇನಾನಿಗಳಂತೆ ಹೋರಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿ 22ಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪರಿಕ್ಕರ್ ಅಂತ್ಯಕ್ರಿಯೆಯಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡ ಕಾರಣ ಮಂಗಳವಾರ ರಾಜ್ಯ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದರು. ಮನೋಹರ್ ಪರಿಕ್ಕರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *