ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಒಬ್ಬನು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಕ್ಕೆ ಖಾಕಿ ಪಡೆ ಗುಂಡೇಟಿನ ರುಚಿ ತೋರಿಸಿದ್ದಾರೆ.
ರಾಜಧಾನಿಯಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದ್ದು, ರೌಡಿ ಶೀಟರ್ ವಿನೋದ್ ಅಲಿಯಾಸ್ ಪಚ್ಚೆ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಪಚ್ಚಿ ರಾಬರಿ, ಸೇರಿದಂತೆ ಹಲವು ಕೊಲೆ ಯತ್ನದಲ್ಲಿ ಭಾಗಿಯಾಗಿದ್ದನು. ಹೀಗೆ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ವಿನೋದ್‍ನನ್ನು ಸೆರೆಹಿಡಿಯಲು ಬಲೆ ಬೀಸಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಲು ಮುಂದಾದಾಗ ಖಾಕಿ ಪಡೆ ಶೂಟೌಟ್ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಆರೋಪಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಕ್ರಿಶ್ಚಿಯನ್ ಸೆರಮನಿ ಬಳಿ ಇರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ದೊರಕಿತ್ತು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಸರೆಂಡರ್ ಆಗುವಂತೆ ಆರೋಪಿಗೆ ಹೇಳಿದ್ದಾರೆ. ಆದರೆ ಆತ ಪೊಲೀಸರ ಮೇಲೆಯೆ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಅಶೋಕ ನಗರ ಇನ್ಸ್‌ಪೆಕ್ಟರ್ ಶಶಿಧರ್, ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಪರಿಣಾಮ ಆರೋಪಿಯ ಬಲಗಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.