ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ ವಹಿಸಲು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕೆಂಪವಾಡದಲ್ಲಿರುವ ಶಾಸಕರ ಕಚೇರಿಯಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಬಿದ್ದು ಹೋಗಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನ ಆದಷ್ಟು ಬೇಗ ದುರಸ್ಥಿಗೊಳಿಸಿ ಜನರಿಗೆ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮುಖ್ಯಮಂತ್ರಿ ಆದ್ಮೇಲೆ ಕೋವಿಡ್ ಕಡಿಮೆ ಆಗುತ್ತಿದೆ: ಪ್ರಭು ಚವ್ಹಾಣ್
ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಅವುಗಳನ್ನ ದುರಸ್ಥಿ ಮಾಡಲು ಕ್ರಮ ಕೈಗೊಳ್ಳಬೇಕು. ಟ್ರಾನ್ಸ್ ಫಾರ್ಮರ್ ಗಳ ದುರಸ್ಥಿ ಮಾಡಿ ನದಿ ತೀರದ ಜನರಿಗೆ ಹಾಗೂ ರೈತರಿಗೆ ವಿದ್ಯುತ್ ಪೂರೈಸಬೇಕು ಎಂದು ಸೂಚನೆ ನೀಡಿದರು. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು. ಈ ಸಮಯದಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.