ಬೆಂಗಳೂರು: ಮತ್ತೆ ಜಾತಿಗಣತಿ ಒಪ್ಪಿಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲ ಬಾರಿ ಮನೆಮನೆಗೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ
Advertisement
Advertisement
ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯ ವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು. ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯ ಮಾಡದೇ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ತಿಳಿಸಿದ್ದಾರೆ.
Advertisement
ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆ, ಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದಿದ್ದಾರೆ. ಇದನ್ನೂ ಓದಿ: 30 ಗುಂಟೆ ಜಮೀನು ಮಾರಾಟ – 2 ಗುಂಪುಗಳ ನಡುವೆ ಮಾರಾಮಾರಿ
Advertisement
2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು. ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆ, ಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರಿಗೆ ಅರ್ಥ ವ್ಯವಸ್ಥೆಯೇ ಗೊತ್ತಿಲ್ಲ: ಪ್ರತಾಪ್ ಸಿಂಹ
ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಂ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು. ಸುಪ್ರೀಂ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೇ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ-ತಾಲೂಕು ಪಂಚಾಯಿತಿಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡ ಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೇ ಕಾರಣದಿಂದ ನ್ಯಾಯಬದ್ಧ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.