– ನಾನು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಯ ಬೆನ್ನಲ್ಲೇ ಇದೀಗ ಗೃಹ ಸಚಿವ ಎಂಬಿ ಪಾಟೀಲ್ ಅವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದರಲ್ಲಿ ತಪ್ಪೇನಿದೆ. ಅವರು ಮತ್ತೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೂಡ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತೇನೆ. ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಉತ್ತಮ ಕೆಲಸ ಕೊಟ್ಟರು. ಅನ್ನಭಾಗ್ಯ, ಕ್ಷೀರ ಭಾಗ್ಯದಂತಹ ಅನೇಕ ಯೋಜನೆ ಜಾರಿ ಮಾಡಿದ್ದಾರೆ. ಬಡವರ ಪರ ಕೆಲಸ ಮಾಡಿದ ಅವರು ಎರಡನೇ ಬಾರಿ ಸಿಎಂ ಆಗಬೇಕಿತ್ತು. ಆದರೆ ಜನರ ತೀರ್ಪನ್ನು ನಾವು ಗೌರವಿಸಬೇಕು. ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದರು.
ನಾನು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದು, ಆದರೆ ಸಿದ್ದರಾಮಯ್ಯ ಅವರಿಗೆ ಇನ್ನೊಂದು ಬಾರಿ ಸಿಎಂ ಆಗುವ ಅರ್ಹತೆ ಇದೆ. ಆದ್ದರಿಂದ ಸಿದ್ದರಾಮಯ್ಯ ಅವರೇ ಸಿಎಂ ಆಗುತ್ತಾರೆ ಎಂದರೆ ನಾನು ಬೇಕಾದರೆ ಕಾಯುತ್ತೇನೆ ಎಂದರು. ಅಲ್ಲದೆ ಸದ್ಯ ಸಮನ್ವಯ ಸಮಿತಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಸಿದ್ದರಾಮಯ್ಯ ಅವರು ಈ ಬಗ್ಗೆ ಗಮನಹರಿಸಬೇಕಾದ ಅಗತ್ಯತೆ ಇದೆ ಎಂದರು.
ಇದೇ ವೇಳೆ ಲೋಕಸಭಾ ಚುನಾವಣೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 16 ರಿಂದ 18 ಸ್ಥಾನ ಗೆಲ್ಲುತ್ತೆ. ಬಿಜೆಪಿ ಪಕ್ಷ ಎಷ್ಟು ಸ್ಥಾನಗಳಿಸುತ್ತೆ ಎಂಬುವುದು ಮೇ 23ಕ್ಕೆ ಎಲ್ಲಾ ಗೊತ್ತಾಗುತ್ತೆ. ರಾಜ್ಯ ಸರ್ಕಾರ ಬೀಳುತ್ತೆ ಎಂದು ಅನೇಕ ಬಾರಿ ಡೆಡ್ ಲೈನ್ ಕೊಟ್ಟಿದ್ದಾರೆ. ಆದರೆ ಸರ್ಕಾರಕ್ಕೆ ಏನೂ ಆಗಿಲ್ಲ. ಮೇ 23 ರ ನಂತರವೂ ಯಾವುದೇ ರಾಜಕೀಯ ಧ್ರುವೀಕರಣ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಿತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಯಡಿಯೂರಪ್ಪ ಆಪರೇಷನ್ ಕಮಲ ಆಡಿಯೋ ಸಿಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ತನಿಖೆ ತಂಡ ರಚನೆ ಮಾಡಬೇಕು ಎನ್ನುವಷ್ಟರಲ್ಲಿ ಚುನಾವಣೆ ಬಂತು ಹೀಗಾಗಿ ವಿಳಂಬ ಆಗಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ತಾರೆ ಎಂದರು.