ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.DRevanna) ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ (SIT) ಅಧಿಕಾರಿಗಳು, ಹೊಳೆನರಸೀಪುರದ (Holenarasipur) ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ರೇವಣ್ಣ ವಿರುದ್ಧ ಆರೋಪಿಸಿರುವ ಮಹಿಳೆಯ ಸಮ್ಮುಖದಲ್ಲಿ, ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಮ್‌ನಲ್ಲಿ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
ಡಿವೈಎಸ್‍ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಸ್‍ಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ
ಸ್ಥಳ ಮಹಜರು ವೇಳೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಪೊಲೀಸರು, ಇನ್ಸ್‌ಪೆಕ್ಟರ್ ಸುರೇಶ್‍ಕುಮಾರ್ ಹಾಗೂ ಸಬ್‍ಇನ್ಸ್‍ಪೆಕ್ಟರ್ ಅಜಯ್‍ಕುಮಾರ್ ಎಸ್‍ಐಟಿ ತಂಡಕ್ಕೆ ಸಹಕಾರ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಮನೆಯಲ್ಲಿದ್ದ ಸಿಪಿಯು, ಮಾನೀಟರ್, ಪ್ರಿಂಟರ್‌ನ್ನು ವಶಕ್ಕೆ ಪಡೆದಿದ್ದಾರೆ.
ಏನಿದು ಪ್ರಕರಣ?
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‍ಡ್ರೈವ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದು, ಸರ್ಕಾರ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಇನ್ನೂ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಅವರಿಗೆ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ರೇವಣ್ಣ ಸಹ ವಿದೇಶಕ್ಕೆ ತೆರಳುವ ಶಂಕೆಯ ಮೇಲೆ ಅವರ ಮೇಲೂ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ