ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ.
ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಚಾರ್ಮಾಡಿ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಸ್‌ಐಟಿಗೆ ಮಾಸ್ಕ್‌ಮ್ಯಾನ್ ದೂರು
ಅಪಘಾತದಲ್ಲಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.
ಅಪಘಾತದ ಬಳಿಕ ಎಸ್ಪಿ ಸಿ.ಎ. ಸೈಮನ್ ಮತ್ತು ತಂಡ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಘಟನೆ ಕುರಿತು ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ 200 ಕೋಟಿ ಷಡ್ಯಂತ್ರ – ಚಿನ್ನಯ್ಯನಿಗೆ ಕರೆ ಮಾಡಿ ಅಪ್ಪಿಕೊಳ್ಳುತ್ತೇನೆ ಎಂದಿದ್ದ ಪ್ರಕಾಶ್ ರಾಜ್
