ನವದೆಹಲಿ: ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮುಂದುವರಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೆ ಸಮಯ ಕೇಳಿರುವ ಡಿ.ಕೆ ಶಿವಕುಮಾರ್ ನೇರ ಚರ್ಚೆ ಮುಂದಾಗಿದ್ದಾರೆ ಎನ್ನಲಾಗಿದೆ.
ಶನಿವಾರ ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಮತ್ತು ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿಯಾಗಿದ್ದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದರು. ಆದರೆ ಈ ಇಬ್ಬರು ನಾಯಕರು ಸೋನಿಯಾ ಗಾಂಧಿ ಬಳಿ ಒಮ್ಮೆ ಚರ್ಚಿಸುವಂತೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿದೆ.
Advertisement
Advertisement
ಈ ಹಿನ್ನೆಲೆ ಸಿದ್ದರಾಮಯ್ಯ ಭೇಟಿ ಬಳಿಕ ಸೋನಿಯಾ ಗಾಂಧಿ ಭೇಟಿಗೆ ಮುಂದಾಗಿರುವ ಡಿ.ಕೆ ಶಿವಕುಮಾರ್ ತಮ್ಮನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವ ಬಗ್ಗೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ. ದೆಹಲಿ ಚುನಾವಣೆಯಲ್ಲಿ ಸೋನಿಯಾ ಗಾಂಧಿ ನಿರತರಾಗಿದ್ದು ಇಂದು ಸಮಯ ನೀಡುವುದು ಅನುಮಾನ ಎನ್ನಲಾಗಿದೆ.