ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಈ ಹಿನ್ನೆಲೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ (Girish Mattannavar) ಅವರು ಮಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದು, ಬ್ಯಾಗ್ ತುಂಬಾ ದಾಖಲೆಗಳನ್ನು ತಂದಿದ್ದಾರೆ.
ಸೌಜನ್ಯ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್ ಅವರು ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಕಚೇರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಪ್ರಕರಣ ರದ್ದುಪಡಿಸುವಂತೆ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾ
ಸೌಜನ್ಯ ಪರವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣನವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಮತ್ತು ಮಾಹಿತಿಯನ್ನ ತನಿಖಾಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.
ಇದೇ ವೇಳೆ, ಸೌಜನ್ಯ ಪ್ರಕರಣದ ವಿಚಾರವಾಗಿ ಮಹೇಶ್ ಶೆಟ್ಟಿ ತಿಮರೋಡಿಗೂ ಎಸ್ಐಟಿ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.
ರಿಟ್ ಅರ್ಜಿ ವಜಾ
ಇನ್ನೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬಹುಚರ್ಚಿತ ‘ಬುರುಡೆ ಪ್ರಕರಣ’ದ (Dharmasthala Case) (ಕ್ರೈಂ ನಂಬರ್ 39/2026) ತನಿಖೆಯನ್ನ ರದ್ದುಪಡಿಸುವಂತೆ ಕೋರಿ, ಪ್ರಕರಣದ ಪ್ರಮುಖ ಆರೋಪಿತರಲ್ಲಿ ಒಬ್ಬರಾದ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ವಜಾಗೊಳಿಸಿತ್ತು.
ಪ್ರಕರಣದ ಹಿನ್ನೆಲೆ ಏನು?
ಧರ್ಮಸ್ಥಳ (Dharmasthala) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪದೊಂದಿಗೆ ಮುಸುಕುಧಾರಿ ವ್ಯಕ್ತಿಯೊಬ್ಬ ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಈ ಪ್ರಕರಣದ ಗಂಭೀರತೆಯನ್ನ ಪರಿಗಣಿಸಿದ ರಾಜ್ಯ ಸರ್ಕಾರ, ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು.
SIT ತನಿಖೆಯಲ್ಲಿ ಷಡ್ಯಂತ್ರ ಬಯಲು
ತನಿಖೆ ಕೈಗೆತ್ತಿಕೊಂಡ SIT ಅಧಿಕಾರಿಗಳು, ಮುಸುಕುಧಾರಿ ವ್ಯಕ್ತಿ ನೀಡಿದ್ದ ಹೇಳಿಕೆಗಳು, ಪತ್ತೆಯಾದ ತಲೆಬುರುಡೆ ಹಾಗೂ ಇತರ ಸಾಕ್ಷ್ಯಗಳ ಮೂಲ ಮತ್ತು ಘಟನೆಗಳ ಹಿನ್ನೆಲೆಯನ್ನ ಕೂಲಂಕಷವಾಗಿ ಪರಿಶೀಲಿಸಿದ್ದರು. ತನಿಖೆಯ ವೇಳೆ ಮೂಲ ದೂರುದಾರನಾಗಿದ್ದ ಚಿನ್ನಯ್ಯನ ಹೇಳಿಕೆಗಳಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿತ್ತು. ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿಂದೆ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿರುವುದಾಗಿ SIT ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿತ್ತು. ಈ ಸಂಬಂಧ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣ, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಒಟ್ಟು 6 ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ನಕಲಿ ದಾಖಲೆ ತಯಾರಿಕೆ ಹಾಗೂ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ SIT ವರದಿಯಲ್ಲಿ ಗಂಭೀರ ಆರೋಪಗಳನ್ನು ಪ್ರಸ್ತಾಪಿಸಲಾಗಿತ್ತು.


