ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಾಲಯ ಒಪ್ಪಿಕೊಂಡಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 6 ರ ಆದೇಶವನ್ನು ರಾಜೇಗೌಡ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಸಿಜೆಐ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿ, ಮೇ 11 ರಂದು ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ಮನವಿ ಮಾಡಿದರು.
ಮತ ಮರು ಎಣಿಕೆ ಪ್ರಕ್ರಿಯೆಯನ್ನು ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ರಾಜೇಗೌಡ ಪರ ವಕೀಲ ದೇವದತ್ ಕಾಮತ್ ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಜೆಐ, ಸಾಮಾನ್ಯವಾಗಿ ನಾವು ಅಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ. ಆದರೆ, ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ ಎಂದು ಹೇಳಿದರು. ತ್ವರಿತ ವಿಚಾರಣೆಗೆ ಕೋರಿಕೆಯನ್ನು ಪರಿಗಣಿಸುವುದಾಗಿ ಪೀಠ ತಿಳಿಸಿದೆ.

