Belgaum
ಕಣ್ಣಿಗೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀರಾಮಸೇನೆ ಕಾರ್ಯಕರ್ತನ ಬರ್ಬರ ಹತ್ಯೆ

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀ ರಾಮಸೇನೆ ಕಾರ್ಯಕರ್ತರೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಅಪ್ಸರಾ ಕೂಟದಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಶ್ರೀರಾಮ ಸೇನೆ ಕಾರ್ಯಕರ್ತನನ್ನು ರೋಹಿತ್ ಪಾಟೀಲ್ (23) ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ರೋಹಿತ್ ಪಾಟೀಲ್ ಅವರ ಜೊತೆಯಲ್ಲಿದ್ದ ಅಕ್ಷಯ್ ಘೋರ್ಪಡೆಗೆ ಗಂಭೀರ ಗಾಯವಾಗಿದ್ದು, ಗೋಕಾಕ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚೂರಿ, ಕೊಡಲಿ, ತಲ್ವಾರಿನಿಂದ ರೋಹಿತ್ ಪಾಟೀಲ್ ಎದೆ, ತಲೆ, ಕೈ ಮತ್ತು ಕಾಲಿಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ರೋಹಿತ್ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಅಂತ ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಎಎಸ್‍ಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
