ಮಂಡ್ಯ: ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂಬಾಲಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಕೆಆರ್ ಪೇಟೆಯ ಸೋಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಜೆಡಿಎಸ್ ಮುಖಂಡ ಜಗದೀಶ್ ಎಂಬವರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಕಾರಿನ ಮೇಲೆ ಕಲ್ಲು ಬಿದ್ದ ಕಾರಣ ಜಖಂಗೊಂಡಿದೆ. ಜೆಡಿಎಸ್ ಕಾರ್ಯಕರ್ತರ ಮೇಲೆ 10 ಮಂದಿಯ ದುಷ್ಕರ್ಮಿಗಳ ತಂಡ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಕಲ್ಲು ತೂರಾಟ ನಡೆಸಿದ್ದ ಆರೋಪದಲ್ಲಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದವರ ಶೋಧ ಕಾರ್ಯ ಮುಂದುವರಿದಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಕೆಆರ್ ಪೇಟೆಯ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಿಖಿಲ್ ಪ್ರಚಾರ ಸಭೆ ನಡೆಸುತ್ತಿದ್ದರು.
ಇತ್ತ ಜೆಡಿಎಸ್ ಸಭೆಯಲ್ಲಿ ಅಕ್ಕಿ ಹೆಬ್ಬಾಳು ಗ್ರಾಮದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಅಭಿಮಾನಿಗಳು ನಟ ದರ್ಶನ್ ಪರ ಜೈಕಾರ ಕೂಗಿದ್ದಾರೆ. ಪರಿಣಾಮ ದರ್ಶನ್ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೂಡಲೇ ಪೊಲೀಸರು ಮಧ್ಯ ಪ್ರವೇಶ ಮಾಡಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.