ಚಿಕ್ಕಮಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವ ಯೋಜನೆಯನ್ನ ಜಾರಿಗೆ ತಂದ ರಾಜ್ಯ ಸರ್ಕಾರ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವುದಾಗಿ ಹೇಳಿತ್ತು. ಆದರೆ ಈಗ ಸರ್ಕಾರ ಕೇವಲ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‍ಟಾಪ್ ನೀಡಲು ಮುಂದಾಗಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಸರ್ಕಾರ ವಿದ್ಯಾರ್ಥಿಗಳ ಮಧ್ಯೆ ಬೇಧ-ಭಾವ ಮಾಡುತ್ತಿರೋದು ಸರಿಯಲ್ಲ ಎಂದು ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಆರೋಪಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿದ್ದಾರೆ.
Advertisement
Advertisement
ಕಾಲೇಜು ಪ್ರಾಂಶುಪಾಲರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳು ತಾಲೂಕು ಕಛೇರಿ ಮುಂಭಾಗ ಗಂಟೆಗೂ ಹೆಚ್ಚು ಕಾಲ ಪ್ರತಿಭಟಿಸಿದರು. ಪ್ರತಿಭಟನೆಯ ಬಳಿಕ ನ್ಯಾಯಕ್ಕಾಗಿ ಒತ್ತಾಯಿಸಿದ ವಿದ್ಯಾರ್ಥಿಗಳು ಶೀರಸ್ತೆದಾರರ ಮೂಲಕ ಮನವಿ ಸಲ್ಲಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.