ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗಿರುವ ಪಾದರಕ್ಷೆಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಾಲಕರು-ಪೋಷಕರು ಪಾದರಕ್ಷೆಗಳನ್ನು ತಿರಸ್ಕರಿಸಿ ಶಾಲೆಯ ಎದುರಿನಲ್ಲೇ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವತಿಯಿಂದ ಮಕ್ಕಳಿಗೆ ಉಚಿತವಾಗಿ ನೀಡಲಾಗಿರುವ ಪಾದರಕ್ಷೆಗಳು ಗುಣಮಟ್ಟದ ಮಾನದಂಡಕ್ಕೆ ಅನುಗುಣವಾಗಿಲ್ಲ. ಪಾದರಕ್ಷೆಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಕ್ಕಳ ಬಳಕೆಗೆ ಯೋಗ್ಯವಾಗಿಲ್ಲ ಎಂದು ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ವಿದ್ಯಾರ್ಥಿಗಳು ಪಾದರಕ್ಷೆಗಳನ್ನು ಧರಿಸದೇ ತಿರಸ್ಕರಿಸಿದ್ದಾರೆ.
ಶಾಲೆಯ ಆವರಣದಲ್ಲಿ ನಡೆದ ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು-ಪೋಷಕರು ಈ ಕುರಿತು ಚರ್ಚಿಸಿ, ಮಕ್ಕಳಿಗೆ ಗುಣಮಟ್ಟದ ಪಾದರಕ್ಷೆಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದರು. ಸರ್ಕಾರ ಮಕ್ಕಳಿಗಾಗಿ ಒದಗಿಸುವ ಸೌಲಭ್ಯಗಳು ಸಮರ್ಪಕ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ವಿತರಿಸುವುದರಿಂದ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಾದರಕ್ಷೆಗಳ ಗುಣಮಟ್ಟ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ವಿತರಿಸಿರುವ ಪಾದರಕ್ಷೆಗಳನ್ನು ಹಿಂಪಡೆದು, ಗುಣಮಟ್ಟದ ಪಾದರಕ್ಷೆಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂದು ಆಗ್ರಹಿಸಲಾಯಿತು.
ಇದಲ್ಲದೆ, ಪಾದರಕ್ಷೆಗಳ ಗುಣಮಟ್ಟದ ಕುರಿತು ಅಗತ್ಯ ದಾಖಲೆ ಹಾಗೂ ಮಾಹಿತಿಯೊಂದಿಗೆ ಲೋಕಾಯುಕ್ತರಿಗೂ ದೂರು ಸಲ್ಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಹಾಗೂ ಪಾಲಕರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಪಾಲಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಒತ್ತಾಯವಾಗಿದೆ.

