– ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು (7th Pay Commission) ಇಂದು ವರದಿಯನ್ನು ಸಲ್ಲಿಸಿದ್ದು, ಮೂಲವೇತನದ 27.5% ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ (K Sudhakar Rao) ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ಶುಕ್ರವಾರ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ಎಂದರು. ಇದನ್ನೂ ಓದಿ: ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ
ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17,000 ರೂ. ಗಳಿಂದ 27,000 ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು, ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ʼಕೈʼ ಟಿಕೆಟ್ ಫೈನಲ್?
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ಈಶ್ವರಪ್ಪ ವೈಯಕ್ತಿಕವಾಗಿ ನನ್ನ ಮೇಲೆ ಆರೋಪ ಮಾಡ್ತಿದ್ದಾರೆ: ಬಿಎಸ್ವೈ