ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 4,200 ರೂ. ದರ ಘೋಷಣೆ ಮಾಡಲೇಬೇಕು ಎಂದು ಆಗ್ರಹಿಸಿ ಮುಧೋಳ(Mudhol) ನಗರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯು(Sugarcane Farmers’ Protest) ಆರನೇ ದಿನಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟುಹಿಡಿದಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ದಿವಂಗತ ರಮೇಶ್ ಗಡದನ್ನವರ್ ವೇದಿಕೆಯಲ್ಲಿ ಕಳೆದ ಆರು ದಿನಗಳಿಂದ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಆರಂಭದ ದಿನಗಳಲ್ಲಿ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾವಿರಾರು ರೈತರು ಮತ್ತು ರೈತ ಮಹಿಳೆಯರು ಟ್ರ್ಯಾಕ್ಟರ್ ಹಾಗೂ ಎತ್ತಿನ ಚಕ್ಕಡಿಗಳೊಂದಿಗೆ ನಗರಕ್ಕೆ ಆಗಮಿಸಿ ಬೃಹತ್ ಪಾದಯಾತ್ರೆ ನಡೆಸಿದರು. ಬಳಿಕ ತಾಲೂಕು ಆಡಳಿತ ಭವನಕ್ಕೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ಇಂದೂ ಸಹ ವೃತ್ತದಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಹೋರಾಟವನ್ನು ಮುಂದುವರಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡರು, “ನಮ್ಮ ಹೋರಾಟದ ಶಕ್ತಿ ಏನೆಂಬುದು ಈಗಾಗಲೇ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಸರ್ಕಾರಕ್ಕೆ ಅರ್ಥವಾಗಿದೆ. ಸದ್ಯ ಸರ್ಕಾರಿ ಅಧಿಕಾರಿಗಳು, ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ನಡುವೆ ಸಂಧಾನ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಇಂದಿನ ಸಭೆಯಲ್ಲಿ ರೈತರಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ನಮ್ಮ ಬೇಡಿಕೆಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ತಾಳಲಿದೆ,” ಎಂದು ನೇರ ಎಚ್ಚರಿಕೆ ನೀಡಿದ್ದಾರೆ.
ಕಬ್ಬು ಬೆಳೆಗಾರರ ಈ ನ್ಯಾಯಯುತ ಹೋರಾಟಕ್ಕೆ ಮುಧೋಳ ನಗರದ ವ್ಯಾಪಾರಸ್ಥರು, ಉದ್ಯಮಿಗಳು, ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳು ಮತ್ತು ವಿವಿಧ ಮಠಾಧೀಶರು ಸಾಥ್ ನೀಡಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೈತಿಕ ಬೆಂಬಲ ಸೂಚಿಸಿದ್ದಾರೆ.
