ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯ ಪ್ರಭಾವಿ ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮುಂದುವರಿಸಿದ್ದಾರೆ.
ಸಂಸದೆ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಇತ್ತೀಚೆಗಷ್ಟೇ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ.
Advertisement
Advertisement
ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದ ಸುಮಲತಾ ಅವರನ್ನು ಬಿ.ಎಲ್.ಸಂತೋಷ್ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ ಬಿ.ಎಲ್ ಸಂತೋಷ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಜೊತೆ ಸುಮಲತಾ ಅಂಬರೀಷ್ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
Advertisement
ಚರ್ಚೆ ಬಳಿಕ ಮಾತನಾಡಿದ ಸುಮಲತಾ ಅಂಬರಿಷ್ ಅವರು, ಚುನಾವಣೆಯಲ್ಲಿ ನನಗೆ ಬೆಂಬಲ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಲು ಬಂದಿದ್ದೇನೆ. ಬಾಹ್ಯ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಕೇಳಿಕೊಂಡಿಲ್ಲ ಹಾಗೂ ಈ ಕುರಿತು ಯಾವುದೇ ಚರ್ಚೆಯಾಗಿಲ್ಲ. ಒಂದು ವೇಳೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾದರೆ ಮಂಡ್ಯ ಜನತೆ ಜೊತೆ ಚರ್ಚಿಸಿ ಮುಂದುವರಿಯುತ್ತೇನೆ ಎಂದು ತಿಳಿಸಿದರು.
Advertisement
ಮಂಡ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ಅಗತ್ಯವಾಗುತ್ತದೆ ಎಂದು ಹೇಳಿದರು.
ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಇಲ್ಲದ ಸಂದರ್ಭದಲ್ಲೇ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿರುವ ಸುಮಲತಾ ಅವರ ನಡೆ ಕುತೂಹಲ ಮೂಡಿಸಿದೆ.