Connect with us

Karnataka

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂ

Published

on

ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಪಕ್ಷದ 17 ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ. ಈ ಮೂಲಕ ವಿಚಾರಣೆ ಬುಧವಾರಕ್ಕೆ ನಿಗದಿಯಾಗಿದೆ.

ಕಾಂಗ್ರೆಸ್ ಪರ ವಕೀಲ ಕಪೀಲ್ ಸಿಬಲ್ ಅವರು ವಿಚಾರಣೆಯನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಕೋರ್ಟಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ಸೋಮವಾರ ನಡೆಯಬೇಕಿದ್ದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಹೀಗಾಗಿ ಅನರ್ಹ ಶಾಸಕರು ತಮ್ಮ ಅರ್ಜಿ ವಿಚಾರಣೆಗೆ ಮತ್ತೆ ಎರಡು ದಿನ ಕಾಯುವಂತಾಗಿದೆ.

ಮೈತ್ರಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ನಡೆದಿತ್ತು. ಸಿಪಿಎಲ್ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಶಾಸಕರ ವಿರುದ್ಧ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಅವರು, ಎಲ್ಲಾ 17 ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದ ವಿರುದ್ಧ 17 ಮಂದಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಯುತ್ತಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅವಕಾಶ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿ ಅನರ್ಹ ಶಾಸಕರು ಇದ್ದಾರೆ. ಆದರೆ ಡಿಸೆಂಬರ್ 5ರಂದು ಉಪ ಚುನಾವಣೆ ನಿಗದಿಯಾಗಿದ್ದರಿಂದ ಸ್ವಲ್ಪ ಆತಂಕವೂ ಶುರುವಾಗಿದೆ.