– ಚುನಾವಣಾಧಿಕಾರಿಗೂ ನೋಟಿಸ್ ಜಾರಿ
– ನಾಲ್ಕು ವಾರ ವಿಚಾರಣೆ ಮುಂದೂಡಿಕೆ
ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಸುಮಾರು 10 ಕೋಟಿ ರೂ. ಹಣವನ್ನು ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್(K Sudhakar) ವಿರುದ್ಧದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme court) ನಾಲ್ಕು ವಾರಗಳ ಕಾಲ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಈ ಹಿಂದೆ ನಡೆದ ವಿಚಾರಣೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದ ಸುಪ್ರೀಂಕೋರ್ಟ್, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಚುನಾವಣಾಧಿಕಾರಿಗೂ ನೋಟಿಸ್ ನೀಡಿದೆ.
ಕಳೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಬಾಗೇಪಲ್ಲಿ ತಾಲೂಕಿನ ಗೂಳೂರು ಗೇಟ್ ಸಮೀಪ ಚುನಾವಣಾಧಿಕಾರಿಗಳು ವಾಹನ ತಪಾಸಣೆ ನಡೆಸಿದ್ದರು. ಈ ವೇಳೆ ಸುಮಾರು 10 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದರು. ಮತದಾರರಿಗೆ ಹಂಚುವ ಉದ್ದೇಶದಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪದಡಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 171E, 171F, 171I ಹಾಗೂ 511 ಅಡಿ ಎಫ್‌ಐಆರ್ ದಾಖಲಾಗಿತ್ತು.ಇದನ್ನೂ ಓದಿ: ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಕೆ.ಜೆ. ಜಾರ್ಜ್ ಸೂಚನೆ
ಈ ಪ್ರಕರಣವನ್ನು ರದ್ದುಪಡಿಸುವಂತೆ ಡಾ. ಕೆ. ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಾನ್ಯಗೊಳಿಸಿ, ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಸದ್ಯ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.ಇದನ್ನೂ ಓದಿ: ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು
