ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ.
ಕಳೆದ ಶನಿವಾರ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಉಂಟಾದ ರಾಜಧಾನಿ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಗಲಭೆಕೋರರಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಬಿಸಿ ಮುಟ್ಟಿಸಲು ಬಿಜೆಪಿ ನೇತೃತ್ವದ ಪಾಲಿಕೆ ಮುಂದಾಗಿತ್ತು. ಪೊಲೀಸ್ ಬಿಗಿ ಬಂದೋಬಸ್ತ್‌ನೊಂದಿಗೆ ಕಾರ್ಪೊರೇಷನ್ ನೆಲಸಮ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಆದರೆ ಅದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ
Advertisement
Advertisement
ಹಿರಿಯ ವಕೀಲರಾದ ದುಷ್ಯಂತ್ ದಾವೆ, ಕಪಿಲ್ ಸಿಬಲ್, ಪಿ.ವಿ.ಸುರೇಂದ್ರನಾಥ್ ಹಾಗೂ ಪ್ರಶಾಂತ್ ಭೂಷಣ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಐ ಎನ್.ವಿ.ರಮಣ ಅವರ ಮುಂದೆ ವಿಷಯ ಪ್ರಸ್ತಾಪಿಸಿದರು. ಗಲಭೆಪೀಡತ ಜಹಾಂಗೀರ್‌ಪುರಿಯಲ್ಲಿ ಪಾಲಿಕೆ ನಡೆಸುತ್ತಿರುವ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ. ಈ ಸಂಬಂಧ ಯಾರಿಗೂ ಯಾವುದೇ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ನಂತರ ಸಿಜೆಐ ರಮಣ ಅವರು, ಕಾರ್ಯಾಚರಣೆ ನಿಲ್ಲಿಸಿ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ಹೊರಡಿಸಿದರು. ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದರು. ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪಾಲಿಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು
Advertisement
ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಆರೋಪಿಗಳ ಆಸ್ತಿಗಳನ್ನು ಧ್ವಂಸಗೊಳಿಸಲು ಬುಲ್ಡೋಜರ್‌ಗಳನ್ನು ಬಳಸುವುದರ ವಿರುದ್ಧ ಜಮೀಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯಲ್ಲಿ ಜಹಾಂಗೀರ್‌ಪುರಿ ಧ್ವಂಸ ಅಭಿಯಾನದ ವಿಷಯವನ್ನು ಉಲ್ಲೇಖಿಸಲಾಗಿತ್ತು.
ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿತ್ತು. ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆ ನಡೆದಿತ್ತು. ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿತ್ತು. ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸುಮಾರು 400 ಪೊಲೀಸರನ್ನು ಸ್ಥಳದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು.