ನವದೆಹಲಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ (Kumbh Mela Stampede) ಸಂಭವಿಸಿ 30 ಜನರು ಸಾವನ್ನಪ್ಪಿ 90ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದು ದುರದೃಷ್ಟಕರ ಎಂದಿರುವ ಸುಪ್ರೀಂ ಕೋರ್ಟ್ (Supreme Court), ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದೆ.
ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಕೀಲ ವಿಶಾಲ್ ತಿವಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾ. ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಇದು ದುರದೃಷ್ಟಕರ ಘಟನೆ ಮತ್ತು ಕಳವಳಕಾರಿ ವಿಷಯವಾಗಿದೆ ಎಂದ ಪೀಠ, ಈ ಬಗ್ಗೆ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸಲಹೆ ನೀಡಿತು. ಅಲ್ಲದೇ, ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಿವಾರಿ ಅವರಿಗೆ ತಿಳಿಸಿದರು.
ಉತ್ತರ ಪ್ರದೇಶ ಸರ್ಕಾರ ಪ್ರತಿನಿಧಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಇದೇ ರೀತಿಯ ಮನವಿಯ ಬಗ್ಗೆ ಮಾಹಿತಿ ನೀಡಿದರು.
ನಿವೃತ್ತ ನ್ಯಾಯಾಧೀಶ ಹರ್ಷ್ ಕುಮಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುತ್ತಿದೆ. ಮಾಜಿ ಪೊಲೀಸ್ ಮುಖ್ಯಸ್ಥ ವಿಕೆ ಗುಪ್ತಾ ಮತ್ತು ನಿವೃತ್ತ ನಾಗರಿಕ ಸೇವಕ ಡಿಕೆ ಸಿಂಗ್ ಕೂಡ ಸಮಿತಿಯ ಭಾಗವಾಗಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರತ್ಯೇಕ ಪೊಲೀಸ್ ತನಿಖೆಗೆ ಆದೇಶಿಸಿದ್ದಾರೆ.
ಜ.29 ರಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು PIL ಸಲ್ಲಿಸಿದ್ದರು.