ನವದೆಹಲಿ: 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿತು.
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.
ಈ ವೇಳೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ನಾಯಕರು ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.