ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

Public TV
2 Min Read
supreme Court 1

ನವದೆಹಲಿ: ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ (RG Kar Medical College) ನಡೆದಿರುವ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್‌ (Supreme Court) ಮಧ್ಯ ಪ್ರವೇಶ ಮಾಡಿದ್ದು, ಸ್ವಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠವು ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗಾಗಲೇ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ (Kolkata High Court) ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯೆ ಸಿಬಿಐ ಸಹ ಪ್ರಕರಣದ ಬೆನ್ನುಹತ್ತಿದೆ.

Kolkata Doctor rape and murder

ಕೋಲ್ಕತ್ತಾ ಪ್ರಕರಣ ಏನು?
ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

kolkata doctor rape and murder case

ಪೊಲೀಸರ ವಿರುದ್ಧ ಬಿಜೆಪಿ ಆರೋಪ:
ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರನ್ನು ರಕ್ಷಿಸುವ ದಂಧೆಯಲ್ಲಿ ತೊಡಗಿದ್ದಾರೆ, ಇತರ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮಾಹಿತಿಯನ್ನು ಕೇಂದ್ರೀಯ ತನಿಖಾ ದಳ ಪ್ರಧಾನ ಕಚೇರಿ ಖಾತೆಗೆ ಟ್ಯಾಗ್‌ ಮಾಡಿದ್ದಾರೆ.

ನಿರ್ಭಯಾ ತಾಯಿ ಆಕ್ರೋಶ:
ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.

Share This Article