ನವದೆಹಲಿ : ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Abrogation of Article 370) ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್ 2 ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ಹೇಳಿದೆ.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಜುಲೈ 27 ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದೆ. ಜೊತೆಗೆ ಈ ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡೆಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಹೇಳಿದೆ. ಇದನ್ನೂ ಓದಿ: ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ – ಅಂಬುಲೆನ್ಸ್ ಅಡ್ಡಗಟ್ಟಿದ ದೃಶ್ಯ ಪತ್ತೆ
ಮುಖ್ಯ ಅರ್ಜಿದಾರರಾದ ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಶೆಹ್ಲಾ ರಶೀದ್ ಪ್ರಕರಣದಿಂದ ಹಿಂದೆ ಸರಿಯುವುದಾಗಿ ಮತ್ತು ಅರ್ಜಿದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಮನವಿ ಮಾಡಿದರು. ಈ ಮನವಿಯನ್ನು ಸುಪ್ರೀಂಕೋರ್ಟ್ ಅನುಮತಿಸಿತು.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ಬಳಿಕ ವಿಚಾರಣೆ ನಡೆಯುತ್ತಿದೆ.
ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ 5 ನ್ಯಾಯಮೂರ್ತಿಗಳಿರುವ ಪೀಠ ವಿಚಾರಣೆ ನಡೆಸಲಿದೆ.
2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.
Web Stories