ಅಧಿಕೃತ ನಿವಾಸವನ್ನು 1 ತಿಂಗಳಲ್ಲಿ ತೆರವುಗೊಳಿಸಿ ಮೆಚ್ಚುಗೆಗೆ ಪಾತ್ರರಾದ ಸುಷ್ಮಾ ಸ್ವರಾಜ್

Public TV
2 Min Read
sushma swaraj

ನವದೆಹಲಿ: ಹೊಸ ಸರ್ಕಾರ ರಚನೆಯಾಗಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಒಂದು ತಿಂಗಳ ಒಳಗಡೆ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಅಲ್ಲದೆ, ಪ್ರಸ್ತುತ ಎನ್‍ಡಿಎ 2.0 ಸರ್ಕಾರದಲ್ಲಿ ಅವರು ಯಾವುದೇ ಸ್ಥಾನವನ್ನು ಹೊಂದಿಲ್ಲ. ಹೀಗಾಗಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು ಸ್ಪಷ್ಟಪಡಿಸಿದ್ದು, ನಾನೀಗ ನಂ.8 ಸಫ್ದಾರ್‍ಜಂಗ್ ರಸ್ತೆ, ನವದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದೇನೆ. ಹೀಗಾಗಿ ನಾನು ಈ ವಿಳಾಸ ಹಾಗೂ ಸಂಪರ್ಕ ಸಂಖ್ಯೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೆ ಟ್ವಿಟ್ಟರ್‍ನಲ್ಲಿನ ಸುಷ್ಮಾ ಸ್ವರಾಜ್ ಅವರ ಹಿಂಬಾಲಕರು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವದಿ ಮುಗಿದ ತಕ್ಷಣ ಸರ್ಕಾರಿ ಬಂಗಲೆ ಖಾಲಿ ಮಾಡುವ ಮೂಲಕ ಯುವ ರಾಜಕಾರಣಿಗಳಿಗೆ ಹಾಗೂ ಇತರರಿಗೆ ನೀವು ಮಾದರಿಯಾಗಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಅತ್ಯಂತ ಕ್ರಿಯಾಶೀಲ ಮಹಿಳಾ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಕೆಲವರು ಸರ್ಕಾರದಲ್ಲಿ ನಿಮ್ಮ ವರ್ಚಸ್ಸಿನ ಉಪಸ್ಥಿತಿಯನ್ನು ಮಿಸ್ ಮಾಡಿಕೊಳ್ಳುತ್ತೇವೆ. ದೇಶದ ಅತ್ಯಂತ ಕ್ರೀಯಾಶೀಲ ಮಹಿಳಾ ರಾಜಕಾರಣಿಯಾದ ನಿಮಗೆ ಆರೋಗ್ಯ, ಐಶ್ವರ್ಯವನ್ನು ದೇವರು ಕರುಣಿಸಲಿ ಎಂದು ಪ್ರತಿಕ್ರಿಯಿಸಿದ್ದಾರೆ.

https://twitter.com/JBMIS/status/1144839301156368384?

ಪ್ರಥಮ ಬಾರಿ ಆಯ್ಕೆಯಾದ 267 ಸಂಸದರಿಗೆ ಮನೆ ಮನೆಗಳನ್ನು ನೀಡಬೇಕಿರುವುದರಿಂದ ಎಲ್ಲ ಮಾಜಿ ಸಂಸದರಿಗೆ ತಮ್ಮ ಅಧಿಕೃತ ನಿವಾಸಗಳನ್ನು ಖಾಲಿ ಮಾಡುವಂತೆ ಮೋದಿ ನೇತೃತ್ವದ ಸರ್ಕಾರ ಕಳೆದ ತಿಂಗಳು ಮನವಿ ಮಾಡಿತ್ತು.

ಅನಧಿಕೃತವಾಗಿ ಸಾರ್ವಜನಿಕ ನಿವಾಸದಲ್ಲಿ ತಂಗಿರುವ ವ್ಯಕ್ತಿಗಳನ್ನು ಹೊರ ಹಾಕುವ ತಿದ್ದುಪಡಿ ಮಸೂದೆಗೆ ಜೂನ್ 12 ರಂದು ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಈ ಬಾರಿಯ ಅಧಿವೇಶನದಲ್ಲಿ ಮಂಡನೆಯಾಗಲಿದೆ.

ಈ ಮಸೂದೆಯ ಅನ್ವಯ ಆರಂಭದಲ್ಲಿ ನೋಟಿಸ್ ನೀಡಲಾಗುತ್ತದೆ. ಬಳಿಕ ಶೋಕಾಸ್ ನೋಟಿಸ್ ನೀಡಿ ತನಿಖೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಎಸ್ಟೇಟ್ ಅಧಿಕಾರಿಗೆ ತೆರವುಗೊಳಿಸುವಂತೆ ಸೂಚಿಸಲಾಗುತ್ತದೆ. ಬಂಗಲೆಯಲ್ಲಿ 5 ತಿಂಗಳಿಗೂ ಹೆಚ್ಚು ದಿನಗಳ ಕಾಲ ವಾಸವಾಗಿದ್ದಲ್ಲಿ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಮಸೂದೆಯಲ್ಲಿದೆ.

Sushma Swaraj

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕಳೆದ ವರ್ಷ ಲಕ್ನೋನಲ್ಲಿರುವ ಸರ್ಕಾರಿ ಬಂಗಲೆ ಖಾಲಿ ಮಾಡಲು 2 ವರ್ಷಗಳ ಕಾಲಾವಕಾಶವನ್ನು ಕೇಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಬಿಎಸ್‍ಪಿ ಸಂಸ್ಥಾಪಕ ಹಾಗೂ ಮಾರ್ಗದರ್ಶಕ ಕನ್ಶಿ ರಾಮ್ ಅವರ ಸ್ಮಾರಕವನ್ನಾಗಿ ಪರಿವರ್ತಿಸಲು ಯತ್ನಿಸಿ ಟೀಕೆ ಒಳಗಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *