– ಜಮಖಂಡಿ-ಮೀರಜ್ ಸಂಚಾರ ಕಡಿತ
ಬೆಳಗಾವಿ: ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಯ (Krishna River) ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು ರಾಯಭಾಗ ತಾಲೂಕಿನ ಕುಡಚಿ(Kudachi Bridge) ಬಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸೇತುವೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ – ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಈ ಸೇತುವೆಯು ಮುಳುಗಡೆಯಾದ್ದರಿಂದ, ಕುಡಚಿ ಮತ್ತು ಉಗಾರಖುರ್ದ್ ನಡುವಿನ ವಾಹನ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ. ಪ್ರತಿದಿನ ನೂರಾರು ಸಾರಿಗೆ ಬಸ್‌ಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುವ ಈ ಪ್ರಮುಖ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.
ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕುಡಚಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ವಾಹನ ಸಂಚಾರಕ್ಕೆ ಕಟ್ಟುನಿಟ್ಟಿನ ತಡೆ ಒಡ್ಡಿದ್ದಾರೆ. ಪ್ರಸ್ತುತ ಈ ಮಾರ್ಗದಲ್ಲಿ ಪ್ರಯಾಣಿಸುವ ಸವಾರರು ಪರ್ಯಾಯ ರಸ್ತೆಯಾಗಿ ಸುಮಾರು 50 ಕಿಲೋಮೀಟರ್ ಹೆಚ್ಚುವರಿ ಸುತ್ತುವರೆದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
