ನವದೆಹಲಿ: ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (HighCourt) ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ (State Election Commission) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme court) ನಿರಾಕರಿಸಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅನಿರುದ್ಧ ಬೋಸ್ ನೇತೃತ್ವದ ದ್ವಿ ಸದಸ್ಯ ಪೀಠ ನಾವು ಮಧ್ಯಪ್ರವೇಶ ಮಾಡುವ ಅಗತ್ಯ ಕಂಡು ಬರುತ್ತಿಲ್ಲ ಎಂದು ಹೇಳಿದೆ.
ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಗಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕಾಲಾವಕಾಶ ಅಂತ್ಯವಾಗಲಿದೆ, ಮುಖ್ಯ ಪ್ರಕರಣವೂ ಹೈಕೋರ್ಟ್‍ನಲ್ಲಿ ಬಾಕಿ ಇರುವಾಗ ನಾವು ಈ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಈ ಹಿನ್ನಲೆ ನೀವೂ ಮತ್ತೆ ಹೈಕೋರ್ಟ್‍ಗೆ ಹೋಗಿ ಎಂದು ಆಯೋಗಕ್ಕೆ ಪೀಠ ಹೇಳಿದೆ. ಇದನ್ನೂ ಓದಿ: ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ವೇಳೆಗೆ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಈ ಸಂಬಂಧ ಕ್ಷೇತ್ರ ಪುನರ್ ವಿಂಗಡಣೆ ಮಾಡಿ, ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು.
ಚುನಾವಣೆಗೆ ದಿನಾಂಕ ಘೋಷಿಸುವ ವೇಳೆಗೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದರಿಂದಾಗಿ ಚುನಾವಣೆ ನಡೆಸಲಾಗದ ಆಯೋಗ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದ ಮನವಿಯಂತೆ ಮೀಸಲಾತಿ ಪ್ರಕಟಿಸಲು, ಕ್ಷೇತ್ರ ಮರು ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿತ್ತು. ಇದನ್ನು ಪ್ರಶ್ನಿಸಿ ಆಯೋಗ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.