ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು: ಸಿಎಂ ಟ್ವೀಟ್‌

Public TV
3 Min Read
siddaramaiah amit shah

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅನುದಾನ ವಿಚಾರವಾಗಿ ಕೇಂದ್ರದ ವಿರುದ್ಧ ಆರೋಪಗಳನ್ನು ಮಾಡಿರುವ ಕಾಂಗ್ರೆಸ್‌ ಈಗ ಮತ್ತೆ ಕೇಂದ್ರ ಸಚಿವರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಲವಾರು ಪ್ರಶ್ನೆಗಳನ್ನು ಅಮಿತ್‌ ಶಾ ಮುಂದಿಟ್ಟಿದ್ದಾರೆ.

ಸಿಎಂ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
ಬರ ಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹ ಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಇದನ್ನೂ ಓದಿ: 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಾ ಅವರೇ?

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂ. ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘ಭಾರತ್ ಬ್ರಾಂಡ್’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ 29 ರೂ. ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಾ ಅವರೇ? ಇದನ್ನೂ ಓದಿ: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ, ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇ. 4.7ರಿಂದ ಶೇ. 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಾ ಅವರೇ? ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್

Share This Article