ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿರುವ ನವೋದಯ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಜೈಬುನ್ನೀಸ ಆತ್ಮಹತ್ಯೆಗೆ ಶರಣಾಗುವ ಮುನ್ನ ತಾಯಿಯೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜನವರಿ 24ರಂದು ಜೈಬುನ್ನೀಸ ವಸತಿ ಶಾಲೆಯ ಕೊಠಡಿಯಲ್ಲೇ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಪ್ರತಿಭಾವಂತೆ ವಿದ್ಯಾರ್ಥಿನಿಯಾಗಿದ್ದ ಜೈಬುನ್ನೀಸ ಸಾವಿಗೆ ವಸತಿ ಶಾಲೆ ಶಿಕ್ಷಕ ರವಿ ಎಂಬವನೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು.
ಶಿಕ್ಷಕ ರವಿ ಜೈಬುನ್ನೀಸಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಬಗ್ಗೆ ಆತ್ಮಹತ್ಯೆಗೆ ಶರಣಾಗುವ ಮುಂಚೆ ತಾಯಿಗೆ ಕರೆ ಮಾಡಿದ್ದ ಜೈಬುನ್ನೀಸ, ಅಳುತ್ತಾ ತನ್ನ ಕಷ್ಟ ಹೇಳಿಕೊಂಡಿದ್ದಳು. ಈ ವೇಳೆ ಜೈಬುನ್ನೀಸ ಮನೆಯವರು ಪೊಲೀಸರಿಗೆ ದೂರು ನೀಡುವಂತೆ ಹೇಳಿದ್ದರು. ಶಾಲೆಯ ಮರ್ಯಾದೆ ಹಾಳಾಗುತ್ತೆ ಎಂದು ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಆತ್ಮಹತ್ಯೆಗೆ ಶರಣಾಗಿದ್ದಳು. ಈ ಬಗ್ಗೆ ವಿದ್ಯಾರ್ಥಿನಿ ಮನೆಯವರು ಕೆ.ಆರ್ ಪೇಟೆ ಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಶಿಕ್ಷಕ ರವಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ಶಿಕ್ಷಕನ ಬಗ್ಗೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಪೋಷಕರಿಗೆ ಅಳುತ್ತಾ ತನ್ನ ಕಷ್ಟ ಹೇಳಿಕೊಂಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿಕ್ಷಕನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.