ಹಾಸನ: ಬೇಲೂರು ಅಂದ್ರೆ ಥಟ್ಟನೇ ನೆನಪಿಗೆ ಬರೋದು ಶಿಲ್ಪಕಲೆಯೊಂದಿಗೆ ವೈಭವಯುತವಾದ ಚನ್ನಕೇಶವನ ಪ್ರತಿರೂಪ. ಕೇಂದ್ರ ಪ್ರಾಚ್ಯವಸ್ತು ಇಲಾಖೆಗೆ ಸೇರಿದ ಈ ದೇವಾಲಯ ವಿಶ್ವಪ್ರಸಿದ್ಧ. ಹಲವು ವಿಶೇಷತೆಗಳನ್ನು ಹೊಂದಿರುವ ಈ ದೇವಾಲಯದಲ್ಲಿ ಸಾಮಾನ್ಯರಿಗೆ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಚಿತ್ರೀಕರಣ ನಿಷೇಧವಿದೆ. ಚಿತ್ರೀಕರಣಕ್ಕೆ ಅವಕಾಶವಿದ್ದರೂ ಸಹ ಹಲವು ಮಿತಿಗಳಿವೆ. ಆದ್ರೆ ತೆಲುಗು ಚಿತ್ರ ತಂಡವೊಂದಕ್ಕೆ ಚಿತ್ರೀಕರಣಕ್ಕೆ ಅನುವು ಮಾಡಿಕೊಡಲಾಗಿದ್ದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
Advertisement
ಜಿಲ್ಲೆಯ ಬೇಲೂರು ಹಳೇಬೀಡು ವಿಶ್ವವಿಖ್ಯಾತ ದೇವಾಲಯಗಳು. ಹೋಯ್ಸಳರ ದೊರೆ ವಿಷ್ಣುವರ್ಧನನ ಕಾಲದಲ್ಲಿ ನಿರ್ಮಾಣವಾಗಿರುವ ಬೇಲೂರಿನ ಚೆನ್ನಕೇಶವ ದೇವಾಲಯಕ್ಕೆ ಪ್ರತಿದಿನ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಾರೆ. ಇವರಲ್ಲಿ ಸಾಕಷ್ಟು ಮಂದಿ ವಿದೇಶಿಯರೂ ಸೇರಿರುತ್ತಾರೆ. ಸಾಮಾನ್ಯ ಜನರಿಗೆ ಈ ದೇವಾಲಯದಲ್ಲಿ ವೀಡಿಯೋ ಚಿತ್ರೀಕರಣಕ್ಕೆ ಅವಕಾಶವಿಲ್ಲ. ಕೇಂದ್ರ ಸರ್ಕಾರ ಅಧೀನದ ಪ್ರಾಚ್ಯವಸ್ತು ಇಲಾಖೆಯ ಸುಪರ್ದಿ ಇದಕ್ಕಿದೆ. ಇಲ್ಲಿ ಯಾವುದೇ ಚಿತ್ರೀಕರಣ ಮಾಡುವುದಾದರೆ ಪ್ರಾಚ್ಯ ವಸ್ತು ಇಲಾಖೆಯಿಂದ ಅನುಮತಿ ಪಡೆಯಬೇಕು. ಜೊತೆಗೆ ಕೆಲವು ನಿಬಂಧನೆಗೆ ಒಳಪಟ್ಟ ಅನುಮತಿ ಮಾತ್ರ ನೀಡಬೇಕು. ಹೀಗಿದ್ದಾಗ ಇಲ್ಲಿ ಕಳೆದ ಮೂರು ದಿನಗಳಿಂದ ತೆಲುಗು ಚಲನಚಿತ್ರವೊಂದರ ಶೂಟಿಂಗ್‍ಗೆ ಅನುಮತಿ ನೀಡಲಾಗಿದೆ. ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ನಾಯಕತ್ವದ ಈ ಚಿತ್ರದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ. ಒಟ್ಟು 7 ದಿನಗಳ ಚಿತ್ರೀಕರಣದಲ್ಲಿ ಈಗಾಗಲೇ ಮೂರು ದಿನಗಳ ಚಿತ್ರೀಕರಣ ಮುಗಿದಿದೆ.
Advertisement
ಕೇವಲ ಚಿತ್ರೀಕರಣಕ್ಕೆ ಅನುಮತಿ ಪಡೆದಿರುವ ಚಿತ್ರತಂಡ, ದೇವಸ್ಥಾನದ ಒಳ ಆವರಣದಲ್ಲಿ ಯಾವುದೇ ಬದಲಾವಣೆಗೆ ಅವಕಾಶವಿಲ್ಲದಿದ್ದರೂ ಸಹ ಹಲವು ಬದಲಾವಣೆಗಳನ್ನು ಮಾಡಿದೆ. ವಿಷ್ಣುವನ್ನ ಆರಾಧಿಸಲ್ಪಡುವ ದೇವಾಲಯದಲ್ಲಿ ಶಿವಲಿಂಗ ಮೂರ್ತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇದರಿಂದಾಗಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ.
Advertisement
ದೇವಸ್ಥಾನಕ್ಕೆ ಉಗ್ರರ ಉಪಟಳವೂ ಇದ್ದು ಭದ್ರತೆಯೂ ಸಾಕಷ್ಟಿದೆ. ಜೊತೆಗೆ ಈ ದೇವಸ್ಥಾನ ವಿಶ್ವ ಪ್ರಸಿದ್ದವಾಗಿದ್ದು ಪ್ರತಿದಿನ ವಿದೇಶಿ ಪ್ರವಾಸಿಗರೂ ಸಹ ಇಲ್ಲಿಗೆ ಬರುತ್ತಾರೆ. ಆವರಣದಲ್ಲಿ ಚಿತ್ರೀಕರಣ ನಡೆಯೋದ್ರಿಂದ ಸಂಪೂರ್ಣ ದೇವಾಲಯವನ್ನು ಸುತ್ತು ಹಾಕುವುದು ಸಾಧ್ಯವಿಲ್ಲ. ಇದ್ರಿಂದಾಗಿ ವಿದೇಶಿಯರಿಗೂ ಸಹ ಇಲ್ಲಿ ಕೊಂಚ ನಿರಾಸೆಯಾಗಿದೆ.
Advertisement
ಕೇಂದ್ರ ಪ್ರಾಚ್ಯ ವಸ್ತು ಇಲಾಖೆಯ ಅಧಿಕಾರಿಗಳು ಇವರಿಗೆ ಅನುಮತಿ ನೀಡಿದ್ದರೂ ಸಹ ಯಾವುದೇ ನಿಬಂಧನೆಗಳನ್ನು ತಿಳಿಸಲಿಲ್ಲವೆ? ಅಥವಾ ಯಾರ ಪ್ರಭಾವ ಇಲ್ಲಿ ಕೆಲಸ ಮಾಡಿದೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಸಾಮಾನ್ಯ ಜನರಿಗೆ ಒಂದು ಕಾನೂನು, ಉಳಿದವರಿಗೆ ಒಂದು ಕಾನೂನು ಆದ್ರೆ ಹೇಗೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.