ಚಿತ್ರದುರ್ಗ: ಮಾರ್ಚ್ 15ಕ್ಕೆ ನಡೆಯಬೇಕಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಟಿಇಟಿ) ಮಾರ್ಚ್ 29ರಂದು ನಡೆಯಲಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಅವರು ಮಾತನಾಡಿದರು. ಈ ವೇಳೆ ಮಾರ್ಚ್ 15ರಂದು ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಅನಿವಾರ್ಯ ಕಾರಣದಿಂದಾಗಿ ಮಾರ್ಚ್ 29ಕ್ಕೆ ಮುಂದೂಡಲಾಗಿದೆ. 1 ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಾರ್ಚ್ 29ರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 2,513 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಡಿಸಿ ಮಾಹಿತಿ ನೀಡಿದರು.
Advertisement
Advertisement
6 ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಧ್ಯಾಹ್ನ 2ರಿಂದ ಸಂಜೆ 4.30 ಗಂಟೆಯವರೆಗೆ 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 7,022 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಕಾಶ ಕಲ್ಪಿಸಬೇಕು ಎಂದರು.
Advertisement
ಪರೀಕ್ಷಾ ಕೇಂದ್ರಗಳಲ್ಲಿ ಸಮರ್ಪಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ 1 ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿ ಹೊರತುಪಡಿಸಿ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡುವ ಮೂಲಕ ಪರೀಕ್ಷಾ ಸಮಯದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
Advertisement
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವಂತೆ, ಪರೀಕ್ಷಾ ನಂತರ ಉತ್ತರ ಪತ್ರಿಕೆ ಹಾಗೂ ಗೌಪ್ಯ ಸಾಮಗ್ರಿಗಳನ್ನು ಮುಖ್ಯ ಅಧೀಕ್ಷಕರಿಂದ ಹಿಂಪಡೆದು ಖಜಾನೆಗೆ ಸಲ್ಲಿಸಲು 11 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಕೇಂದ್ರಕ್ಕೆ ನಿಗದಿಪಡಿಸಿದ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ಮೇಲ್ವಿಚಾರಕರನ್ನಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಶಿಕ್ಷಕರನ್ನು ಮಾತ್ರ ನೇಮಿಸಿಕೊಳ್ಳಬೇಕು. ಕೊಠಡಿ ಮೇಲ್ವಿಚಾರಕರ ಪಟ್ಟಿಯನ್ನು ಉಪನಿರ್ದೇಶಕರಿಂದ ಅನುಮೋದಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದರು.
ಈ ಸಭೆಯಲ್ಲಿ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ಹೊಸದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಇನ್ಸ್‌ಪೆಕ್ಟರ್ ಮೃತ್ಯುಂಜಯ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.