– ಸಂಪುಟ ವಿಸ್ತರಣೆ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರಕ್ಕೆ ಬಿಗ್ ಶಾಕ್
– ಈ ವಾರ ಎಲ್ಲವೂ ನಿರ್ಧಾರ
ಬೆಳಗಾವಿ: ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲು ಅತೃಪ್ತರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಇದರ ಭಾಗವಾಗಿ ಮಾಜಿ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನದಿಂದ ಕೈಬಿಟ್ಟ ವಿಚಾರವಾಗಿ ಆಪ್ತವಲಯದಲ್ಲಿ ಅಸಮಾಧಾನ ಹೊರ ಹಾಕಿರುವ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನವೇ ಹೋಯ್ತು, ಇನ್ನು ಶಾಸಕ ಸ್ಥಾನ ಯಾಕೆ ಬೇಕು? ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಾನು ಏನು ಎನ್ನುವುದನ್ನು ತೋರಿಸಿಕೊಡುತ್ತೇನೆ. ನನ್ನೊಂದಿಗೆ ಎಷ್ಟು ಮಂದಿ ಶಾಸಕರಿದ್ದಾರೆ ಅನ್ನೊಂದನ್ನು ಈಗ ಹೇಳಲ್ಲ. ಒಂದು ವಾರ ಕಾದು ನೋಡಿ, ಎರಡು ಮೂರು ದಿನಗಳಲ್ಲಿ ರಾಜೀನಾಮೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ. ಆದರೆ ನಾನು ಬೇಕಾದರೆ ನಾಳೆಯೇ ರಾಜೀನಾಮೆ ನೀಡಬಹುದು ಎಂದು ತಿಳಿಸಿದ್ದಾರೆ.
ಈ ಕುರಿತು ಶಾಸಕ ರಮೇಶ್ ಜಾರಕಿಹೊಳಿ ಅವರು ಮಾತನಾಡಿರುವ ಆಡಿಯೋ ಧ್ವನಿ ಪಬ್ಲಿಕ್ ಟಿವಿಗೆ ಲಭ್ಯವಿದ್ದು, ರಾಜೀನಾಮೆ ನಿರ್ಧಾರ ಮಾಡಿರುವುದು ನಿಜ, ಆದರೆ ಎಷ್ಟು ಶಾಸಕರು ರಾಜೀನಾಮೆ ನೀಡಿಲಿದ್ದಾರೆ ಎಂಬುದು ಹೇಳಲು ಸಾಧ್ಯವಿಲ್ಲ. ಈ ಕುರಿತು ಕುಳಿತು ಚರ್ಚೆ ನಡೆಸಲು ಸ್ಥಳ ನಿಗದಿ ಮಾಡಲಾಗಿದ್ದು, ಈ ವಾರ ಎಲ್ಲವೂ ನಿರ್ಧಾರ ಆಗಲಿದೆ ಎಂದು ಹೇಳಿದ್ದಾರೆ. ಇದನ್ನು ಓದಿ: ಸಚಿವ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ
ಇದರೊಂದಿಗೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವುದು ಖಚಿತವಾಗಿದ್ದು, ಯಾವ ಸಮಯದಲ್ಲಿ ಎಷ್ಟು ಮಂದಿಗೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದನ್ನು ಮಾತ್ರ ತಿಳಿಯಬೇಕಿದೆ. ಕಾಂಗ್ರೆಸ್ಸಿನ 5 ಜನ ಪರಿಷತ್ ಸದಸ್ಯರು ಹಾಗೂ 5 ರಿಂದ 6 ಜಿಲ್ಲೆಗಳ ಶಾಸಕರು ರಮೇಶ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಾರಕಿಹೊಳಿ ಆಪ್ತ ಕಾಂಗ್ರೆಸ್ ಎಂಎಲ್‍ಸಿ ವಿವೇಕ್ ರಾವ್ ಪಾಟೀಲ್ ಸೇರಿದಂತೆ, ಹಲವು ಮುಖಂಡರು ರಮೇಶ್ ಅವರು ಯಾವುದೇ ನಿರ್ಧಾರ ಕೈಗೊಂಡರೂ ನಮ್ಮ ಬೆಂಬಲವಿರುತ್ತದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಸದ್ಯ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ನಿರ್ಧಾರ ರಾಜ್ಯ ರಾಜಕೀಯ ವಲಯದಲ್ಲಿ ಏನು ಪರಿಣಾಮ ಉಂಟು ಮಾಡಲಿದೆ ಎನ್ನುವುದು ಈ ವಾರ ಗೊತ್ತಾಗಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv