ಮಂಡ್ಯ: ಸಾಲಬಾಧೆ ತಾಳಲಾರದೆ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾದ ಮಂಜು(50), ಇಂದ್ರಮ್ಮ(45) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲ ಬಾಧೆಯಿಂದ ಬಳಲುತ್ತಿದ್ದರಿಂದ ಮನನೊಂದು ಇಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಐದು ವರ್ಷಗಳ ಹಿಂದೆ ಕೆ.ಶೆಟ್ಟಿಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದ ದಂಪತಿ ಕೋಳಿಫಾರಂನಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎಷ್ಟು ದುಡಿದರೂ ಹಣ ಸಾಕಾಗದೆ, ಸಾಲ ಮಾಡಿಕೊಂಡಿದ್ದರು. ಹೀಗಾಗಿ ಸಾಲದ ಹೊರೆಯನ್ನು ನಿಭಾಯಿಸಲು ಸಾಧ್ಯವಾಗದೇ ಗಂಡ ಹೆಂಡತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಮಾದಿಹಳ್ಳಿ ಗ್ರಾಮದಲ್ಲಿಯೂ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಮಕೃಷ್ಣ (45) ಸಾಲಬಾದೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಊಟ ಮಾಡಿ ಕುಟುಂಬದವರ ಜೊತೆ ಚೆನ್ನಾಗಿ ಮಾತನಾಡಿ ಮಲಗಿದ್ದ ರೈತ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮನೆ ಪಕ್ಕದ ತೋಟದ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೃಷಿಗಾಗಿ ಬ್ಯಾಂಕ್ನಲ್ಲಿ ಸುಮಾರು 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಬಿಂಡಿಗನವಿಲೆ ಎಸ್ಬಿಐ ಬ್ಯಾಂಕ್ ಮತ್ತು ಸಹಕಾರ ಸಂಘಗಳು ಮತ್ತು ಸ್ಥಳೀಯವಾಗಿ ಕೈಸಾಲಕ್ಕಾಗಿ ಖಾಸಗಿ ವ್ಯಕ್ತಿಗೆ ಜಮೀನು ಆದಾರ ನೀಡಿದ್ದರು ಎಂದು ತಿಳಿದು ಬಂದಿದೆ.
ಟಮೋಟೊ, ಕಬ್ಬು, ಬಾಳೆ ಬೆಳೆ ಬೆಳೆಯಲು ಸಾಲಮಾಡಿ, ಬೆಳೆಯಲ್ಲಿ ನಷ್ಟ ಅನುಭವಿಸಿದ್ದು, 3 ಬೋರ್ ವೆಲ್ ಕೊರೆಸಿ ನೀರುಬಾರದೆ ಕಂಗಲಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಂಡಿಗನವಿಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆಯಷ್ಟೇ ವಿಜಯಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿತ್ತು.