ಚಿಕ್ಕಬಳ್ಳಾಪುರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಹೆಬ್ಬಾಳ-ನಾಗವಾರ(ಎಚ್‍ಎನ್) ವ್ಯಾಲಿ ಯೋಜನೆ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲೂ ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹೇಳಿದ್ದಾರೆ.
ಎಚ್‍ಎನ್ ವ್ಯಾಲಿ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದು ಗಂಟೆ ಅವಧಿಯಲ್ಲಿ ಶುದ್ಧೀಕರಿಸದ ನೀರನ್ನ ಲಕ್ಷ್ಮೀಸಾಗರ ಕೆರೆಗೆ ಬಿಟ್ಟಿದ್ದಾರೆ. ಇದನ್ನೇ ಕೆಲವರು ರಾಜಕೀಯ ಆಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಈಗಾಗಲೇ ಕೆರೆಗೆ ಹರಿಸಲಾಗುತ್ತಿರುವ ನೀರನ್ನು 2 ಹಂತದಲ್ಲಿ ಶುದ್ಧೀಕರಿಸಲಾಗುತ್ತಿದೆ. 3ನೇ ಹಂತದಲ್ಲಿ ಶುದ್ಧೀಕರಣ ನಡೆಸಲು ಸಿಎಂ ಅವರಿಗೆ ಮನವಿ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಈ ಕುರಿತ ಆದೇಶವನ್ನು ಸಿಎಂ ಘೋಷಣೆ ಮಾಡುವ ಭರವಸೆ ಇದೆ. ಯಾವುದೇ ಅಭಿವೃದ್ಧಿ ಯೋಜನೆ ಎಂದೂ ದುಡ್ಡು ಮಾಡುವ ಯೋಜನೆ ಆಗುವುದಿಲ್ಲ. ಎತ್ತಿನ ಹೊಳೆ ಯೋಜನೆಗೆ ಈ ಬಾರಿ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ಎಚ್ ಎನ್ ವ್ಯಾಲಿ ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಸರ್ಕಾರದ ಪರ ವಕೀಲರು ಸಮರ್ಪಕ ವಾದ ಮಂಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದು.
ಕಳೆದ ತಿಂಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀ ಸಾಗರ ಕೆರೆಗೆ ಕೋರಮಂಗಲ ಚಲ್ಲಘಟ್ಟ ವ್ಯಾಲಿ ನೀರು ಹರಿಸಿದ್ದರಿಂದ ನೀರಿನಲ್ಲಿ ನೊರೆ ಕಾಣಿಸಿಕೊಂಡು ಜಿಲ್ಲೆಯ ಜನರಲ್ಲಿ ಆಂತಕ ಸೃಷ್ಟಿಸಿತ್ತು. ಇದಾದ ಬಳಿಕ ಕೆಲ ಹೋರಾಟಗಾರರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನೀರಿನ ಗುಣಮಟ್ಟ ಕುರಿತು ಶಂಕೆ ವ್ಯಕ್ತಪಡಿಸಿ ನೀರು ಹರಿಸದಂತೆ ತಡೆಯಾಜ್ಞೆ ತಂದಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews