Monday, 19th August 2019

Recent News

ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಬಾರಿ ಧರ್ಮಸ್ಥಳದಲ್ಲೂ ನೀರಿನ ಅಭಾವ ಉಂಟಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸರ್ಕಾರ ಚೆಕ್ ಡ್ಯಾಂ ನಿರ್ಮಿಸಿ ನೀರಿನ ಸಮಸ್ಯೆ ಪರಿಹರಿಸಲು ಮುಂದಾಗಿದೆ.

ಮುಖ್ಯಮಂತ್ರಿ ಸಲಹೆ ಮೇರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಧರ್ಮಸ್ಥಳದಲ್ಲಿರುವ ನೀರಿನ ಅಭಾವದ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಶ್ರೀ ಹೆಗ್ಗಡೆಯವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ. ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ ನಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು, 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ತಮ್ಮ ಕಳವಳವನ್ನು ಹೊರಹಾಕಿದ್ದರು.

ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ಇರುವ ಹಿನ್ನೆಲೆ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *