DistrictsKarnatakaLatestMain PostUdupi

ಸಾವಿರಾರು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್

ಉಡುಪಿ: ರಾಜ್ಯದಲ್ಲಿ ಪಿಎಫ್‌ಐ ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ. ಅವರು ಅಧಿಕಾರದಲ್ಲಿ ಇದ್ದಾಗ ಪಿಎಫ್‌ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ 100ಕ್ಕೂ ಹೆಚ್ಚು ಪ್ರಕರಣ ವಾಪಸ್ ಪಡೆಯಲಾಗಿತ್ತು. 1,400ಕ್ಕೂ ಹೆಚ್ಚು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೆಸ್ ಕಾರಣವಾಗಿತ್ತು ಎಂದು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದ ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದನ್ನು ಸ್ವಾಗತಿಸಿದ ಸುನಿಲ್ ಕುಮಾರ್, ಪಿಎಫ್‌ಐ, ಐಸಿಸ್‌ನಂತಹ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು ಎಂದು ಹೇಳಿದರು.

ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆಯ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ ಪಿಎಫ್‌ಐ ನಡೆಸಬಹುದಾಗಿದ್ದ ಭಾರೀ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ ಎಂದು ಶ್ಲಾಘಿಸಿದರು.

ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಇದೇ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದಾಗ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಿರಲಿಲ್ಲ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತನ್ನದೇ ಶಾಸಕರ ಮನೆಗೆ ಬೆಂಕಿ ಹಚ್ಚಿದಾಗಲೂ ಕಾಂಗ್ರೆಸ್ ಧ್ವನಿ ಎತ್ತಿರಲಿಲ್ಲ. ಇದು ಪಿಎಫ್‌ಐ ಪರ ಕಾಂಗ್ರೆಸ್ ತಾಳಿದ್ದ ಮೃದು ಧೋರಣೆಗೆ ಸಾಕ್ಷಿಯಾಗಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆ ಹಾಕಿಸಿತ್ತು – PFI ನಿಷೇಧವನ್ನು ಸ್ವಾಗತಿಸಿದ ಮುಸ್ಲಿಮ್‌ ಲೀಗ್‌

ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದೆ, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ. ಸಾಮರ್ಥ್ಯ ಇದ್ದರೆ ಪಿಎಫ್‌ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದಾಗ ಈ ಸಂಘಟನೆಗಳ ನಿಷೇಧಕ್ಕೆ ನಾನು ಒತ್ತಾಯಿಸಿದ್ದೆ. ಪ್ರವೀಣ್ ಹತ್ಯೆಯಲ್ಲೂ ಪಿಎಫ್‌ಐ ಪಾತ್ರವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಹಿಂದೆ ಸಿಮಿ ಸಂಘಟನೆಯನ್ನು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಬ್ಯಾನ್ ಮಾಡಿತ್ತು. ಅದರ ರೂಪಾಂತರಿ ತಳಿ ಪಿಎಫ್‌ಐ ಅನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ನಿಷೇಧಿಸಿದೆ. ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು. ಇದನ್ನೂ ಓದಿ: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ: ಬಸವರಾಜ ಬೊಮ್ಮಾಯಿ

Live Tv

Leave a Reply

Your email address will not be published. Required fields are marked *

Back to top button