ಚಾಮರಾಜನಗರ: ಗುಂಡ್ಲುಪೇಟೆ (Gundlupet) ತಾಲೂಕಿನ ಬೊಮ್ಮಲಾಪುರ ಗ್ರಾಮದ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹುಲಿಯೊಂದು ಬಿದ್ದಿದ್ದು, ಇದರಿಂದ ಸುತ್ತಮುತ್ತಲಿನ ಗ್ರಾಮಗಳ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ವಡೆಯನಪುರ ಗ್ರಾಮದ ಹೊರವಲಯದಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಹುಲಿ ಉಪಟಳದಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರೈತರು ಭಯಪಡುವಂತಾಗಿತ್ತು. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿತ್ತು. ಇದನ್ನೂ ಓದಿ: ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಮಿತಿ ರಚನೆ: ಪ್ರಹ್ಲಾದ್ ಜೋಶಿ
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹುಲಿಯನ್ನು ಸೆರೆ ಹಿಡಿಯಲು ಬೋನು ಇರಿಸಿತ್ತು. ಇದೀಗ ಹುಲಿ ಬೋನಿಗೆ ಬಿದ್ದಿರುವುದರಿಂದ ರೈತರು ಹಾಗೂ ಗ್ರಾಮಸ್ಥರು ನಿರಾಳರಾಗಿದ್ದಾರೆ.
