ಬಾಗಲಕೋಟೆ: ದಿವಂಗತ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಪ್ರಚಾರ ಶುರು ಮಾಡಿದ್ದು, ಇಂದು ಬಿಜೆಪಿ ನಾಯಕರು ದಂಡು ಜಮಖಂಡಿ ಕ್ಷೇತ್ರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ.
ಜಮಖಂಡಿ ಕ್ಷೇತ್ರಕ್ಕೆ ಇಂದು ಮಾಜಿ ಸಿಎಂ ಯಡಿಯೂರಪ್ಪ ರಂಗಪ್ರವೇಶ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮಾಜಿ ಸಚಿವ ಮುರುಗೇಶ ನಿರಾಣಿಯವರ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಂತರ ಜಮಖಂಡಿ ಕ್ಷೇತ್ರದ ಕಡಪಟ್ಟಿ ಗ್ರಾಮದಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಹುನ್ನೂರು, ಅಲಗೂರು, ತೊದಲಬಾಗಿ ಗ್ರಾಮಗಳಲ್ಲಿ ಮತಯಾಚನೆ ನಡೆಸಲಿದ್ದಾರೆ.
ಸಾಯಂಕಾಲ 5 ಗಂಟೆಗೆ ಜಮಖಂಡಿ ನಗರದ ಅಂಬೇಡ್ಕರ್ ವೃತ್ತದಿಂದ ಬಸವಭವನದ ವರೆಗೆ ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ನಂತರ ಬಸವಭವನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಬಿಎಸ್‍ವೈ ಗೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಸಚಿವ ಗೋವಿಂದ ಕಾರಜೋಳ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ ಶಾಸಕರಾದ ವೀರಣ್ಣ ಚರಂತಿಮಠ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು ಯಡಿಯೂರಪ್ಪನವರಿಗೆ ಸಾಥ್ ನೀಡಿ, ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv