ನವದೆಹಲಿ: ಲೋಕಸಭೆ ಚುನಾವಣೆಗೆ ಇನ್ನೂ ಕೆಲವು ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಚುನಾವಣಾ ಕಸರತ್ತು ಆರಂಭಿಸಿದೆ.
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮರ ಸಾರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್, ಇಂದು ಎರಡನೇ ಕಾರ್ಯಕಾರಣಿ ಸಮಿತಿ ಸಭೆ ನಡೆಸಲಿದೆ. ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಎಲ್ಲ ಸದಸ್ಯರು ಭಾಗಿಯಾಗಲಿದ್ದಾರೆ.
Advertisement
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆಯ ನೇತೃತ್ವ ವಹಿಸಿಕೊಳ್ಳಲಿದ್ದು, ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 51 ಜನ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸದ್ಯ ದೇಶದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರವಾಗಿ ಚರ್ಚೆ ನಡೆಯಲಿದೆ.
Advertisement
Advertisement
ಸಭೆಯ ಮುಖ್ಯ ವಿಷಯವಾಗಿ ರಾಷ್ಟ್ರೀಯ ಪೌರತ್ವ ನೊಂದಣಿ ವಿಷಯ ಪರಿಗಣಿಸಿದ್ದು, ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುವ ರೂಪುರೇಷೆಗಳ ಬಗ್ಗೆ ಚರ್ಚೆ ಆಗಲಿದೆ. ಈಗಾಗಲೇ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿದ್ದು, ಅವರೊಂದಿಗೆ ಕಾಂಗ್ರೆಸ್ ಒಟ್ಟಾಗಿ ಹೋರಾಟ ನಡೆಸುವ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ಜೊತೆಗೆ ಲೋಕಸಭೆಗೆ ಮುನ್ನ ಎದುರಾಗುವ ರಾಜಸ್ಥಾನ ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ಚುನಾವಣೆ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ.
Advertisement
ಚುನಾವಣೆ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸುವುದು ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ಎನ್ ಆರ್ ಸಿ ಮುಂದಿಟ್ಟುಕೊಂಡು ಬಿಜೆಪಿ ಬಗ್ಗು ಬಡೆಯಲು ಕಾಂಗ್ರೆಸ್ ಪ್ಲಾನ್ ರೂಪಿಸಲಿದೆ. ರಾಜ್ಯದಲ್ಲಿ ಸ್ಥಳೀಯ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ಕೆ.ವೇಣುಗೋಪಾಲ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ಲೋಕಸಭೆ ಮೈತ್ರಿ ವಿಚಾರವಾಗಿ ಸಾಕಷ್ಟು ಗೊಂದಲ ಹಾಗೂ ಸ್ವಪಕ್ಷೀಯರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಇದೇ ತಿಂಗಳ 13ಕ್ಕೆ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೀದರ್ ನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.